ಬಿಪಿಎಲ್ ಕಾರ್ಡ್: ಜೂ.1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು.

ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿಯನ್ನೇ ಮಾನದಂಡವಾಗಿ ನಿಗದಿಪಡಿಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಜನರು ಬಿಪಿಎಲ್ ಪಡಿತರ ಚೀಟಿಗಾಗಿ ಆಹಾರ ಇಲಾಖೆ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಜಿ. ಗ್ಯಾನೇಂದ್ರ ಕುಮಾರ್ ಗಂಗ್ವಾರ್, ‘ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿತ್ತು. ಈ ಹಿಂದೆಯೇ ಮಂಜೂರಾದ ಪಡಿತರ ಚೀಟಿಗಳ ವಿತರಣೆ ಪ್ರಗತಿಯಲ್ಲಿದೆ. ಆದ್ದರಿಂದ ಜೂನ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸಲಾಗುವುದು’ ಎಂದಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top