ನವದೆಹಲಿ: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. 11 ಜನರಿಗೆ ಗಾಯಗೊಂಡಿದ್ದು, ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಕಾರಣ ಏನು?
ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದು ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ. ದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್‌ರಾಜ್ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್‌ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ.
ಪ್ಲಾಟ್‌ಫಾರ್ಮ್ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್‌ರಾಜ್‌ಗೆ ಹೊರಡುವ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಎನ್‌ಡಿಆರ್‌ಎಫ್ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್‌ಡಿಆರ್‌ಎಫ್ ಮಾಹಿತಿ ನೀಡಿದೆ.
ಪ್ರಧಾನಿ ಸಂತಾಪ
ಕಾಲ್ತುಳಿತ ದುರಂತದ ವಿಷಯ ತಿಳಿದು ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆ ನಾವಿರುತ್ತೇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ತೊಂದರೆಗೊಳಗಾದವರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆದೇಶ
ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ 14 ಮತ್ತು 15ನೇ ಪ್ಲಾಟ್‌ಫಾರ್ಮ್ಗೆ ಏಕಾಏಕಿ ನೂರಾರು ಜನರು ನುಗ್ಗಿದ್ದರಿಂದ ದುರ್ಘಟನೆ ಸಂಭವಿಸಿದೆ. ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.