87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ

Kannada Nadu
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮೂರನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್.ಚಲುವರಾಯಸ್ವಾಮಿ ಅವರು ಹೇಳಿದರು.

ನಗರದ ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ವೇದಿಕೆಗಳ ಸಿದ್ಧತೆ ಕಾರ್ಯಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 70-80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ, ಎರಡು ಸಮಾನಾಂತರ ವೇದಿಕೆ, 60 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. 55 ವಸ್ತುಪ್ರದರ್ಶನ ಮಳಿಗೆಗಳು, 350 ವಾಣಿಜ್ಯ ಮಳಿಗೆ , 450 ಪುಸ್ತಕ ಮಳಿಗೆಗಳು ಕೂಡ ತಲೆಎತ್ತಿವೆ. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್ ಗಳನ್ನು ತೆರೆಯಲಾಗಿದ್ದು ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ ಎಂದರು.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಹಾರದ ಗುಣಮಟ್ಟ ಪರೀಕ್ಷೆ ಮಾಡಿ ವರದಿ ಪಡೆಯಲಾಗುತ್ತದೆ. ನೀರನ್ನು ಸಹ ಪರೀಕ್ಷಿಸಲಾಗುತ್ತದೆ. ಸ್ವಚ್ಛತೆಗೆ 250 ಸಿಬ್ಬಂದಿಯನ್ನು ನೇಮಿಸಲಾಗಿದೆ. 150ಕ್ಕೂ ಹೆಚ್ಚು ವಿವಿಧ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. 6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್ ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್ ನೀಡಲಾಗುವುದು ಎಂದರು.

ಸಮ್ಮೇಳನಕ್ಕೆ ಆಗಮಿಸುವ 7 ತಾಲೂಕು ಕೇಂದ್ರಗಳಿಂದ 15 ಉಚಿತ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಡ್ಯ ನಗರದಿಂದ ಕೂಡ ಬಸ್ ಗಳು ಸಮ್ಮೇಳನದ ಸ್ಥಳಕ್ಕೆ ಉಚಿತವಾಗಿ ಕರೆತರಲಿವೆ. ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಕೂಡ ಉಚಿತ ಸಾರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಬೆಂಗಳೂರಿನಿಂದ 30 ನಿಮಿಷಕ್ಕೆ ಒಂದು ವಿಶೇಷ ಬಸ್ ಸಂಚರಿಸಲಿದೆ ಎಂದರು.

ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು ಗುರುವಾರ ಸಂಜೆ ಮಂಡ್ಯಕ್ಕೆ ಆಗಮಿಸಲಿದ್ದು ಅವರನ್ನು ಬರಮಾಡಿಕೊಳ್ಳಲಾಗುವುದು. ಡಿ.20ರ ಶುಕ್ರವಾರ ಬೆಳಗ್ಗೆ 6ಕ್ಕೆ ಧ್ವಜಾರೋಹಣ ನೆರವೇರಲಿದೆ. 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಹಗಲುವೇಷ, ಮಹಿಳಾ ವೀರಗಾಸೆ, ಗೊರವರ ಕುಣಿತ, ಕಂಸಾಳೆ, ಕರಗ, ಸುಗ್ಗಿಕುಣಿತ, ಕೋಲಾಟ ಒಳಗೊಂಡಂತೆ ಪೂರ್ಣಕುಂಭ ಹೊತ್ತ 300 ಮಹಿಳೆಯರು ಹಾಗೂ 50ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಮೆರವಣಿಗೆಗೆ ಮೈಸೂರು ಅರಮನೆ ರಾಜವಂಶಸ್ಥರಾದ ಪ್ರಮೋದಾದೇವಿ ಅವರು ಚಾಲನೆ ನೀಡಲಿದ್ದಾರೆ ಎಂದರು.

ಮೂರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದವೂ ಸೇರಿದಂತೆ ‌11 ಗೋಷ್ಠಿಗಳು, 2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿಗಳು ಆಯೋಜನೆಗೊಂಡಿವೆ. ಸಮ್ಮೇಳನದ ಅಂಗವಾಗಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ, ಅಂಬೇಡ್ಕರ್ ಭವನ, ಸಮಾನಾಂತರ ವೇದಿಕೆ ಮತ್ತು ಪ್ರಧಾನ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು ನಡೆಯಲಿದೆ. ಪ್ರಧಾನ ವೇದಿಕೆಯಯಾತ್ರೆ “ನುಡಿ ಜಾತ್ರೆಯ ಸ್ವರ ಯಾತ್ರೆ” ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.20ರ ಮೊದಲ ದಿನ ಸಾಧುಕೋಕಿಲ ಮತ್ತು ರಾಜೇಶ್ ಕೃಷ್ಣನ್ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.21ರಂದು ಅರ್ಜುನ್ ಜನ್ಯ ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.22ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪೊಲೀಸ್ ಬ್ಯಾಂಡ್ ಇರಲಿದೆ ಎಂದು ವಿವರಿಸಿದರು.

ಚೆಸ್ಕಾಂ ವತಿಯಿಂದ ನಗರದಲ್ಲಿ ವಿದ್ಯುತ್ ಅಲಂಕಾರ ಮಾಡಲಾಗುತ್ತಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಾರ್ಥ 87 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ “ಬೆಲ್ಲದಾರತಿ” ಹೆಸರಿನ ಸ್ಮರಣ ಸಂಚಿಕೆ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ‌ ನಾಡೋಜ ಮಹೇಶ್ ಜೋಶಿ ಮಾತನಾಡಿ, ಈ ಸಮ್ಮೇಳನದಲ್ಲಿ ಸಂಪೂರ್ಣ ತಂತ್ರಜ್ಞಾನ ಉಪಯೋಗಿಸಿ ಸಿದ್ಧತೆ ನಡೆಸಿದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಮೂರು ವೇದಿಕೆಗಳಿಗೆ ಸಮಾನ ಗೌರವ, ಘನತೆ ನೀಡಲಾಗಿದೆ. ಮೂರು ವೇದಿಕೆಗೆ ಅಷ್ಟೇ ಮಹತ್ವವಿದೆ. ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರೇ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದ ಮಾಡಿರುವ “ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ”, ಕನ್ನಡದಿಂದ ಇಟಲಿಯನ್ ಗೆ ಅನುವಾದಗೊಂಡಿರುವ ಖ್ಯಾತ ಕಾದಂಬರಿಕಾರ್ತಿ ತ್ರಿವೇಣಿ ಅವರ ಶರಪಂಚರ ಕಾದಂಬರಿ ಸಮ್ಮೇಳನದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಕ್ಕ ಸಂಸ್ಥಾಪಕ ಅಮರ್ ನಾಥ್ ಸೇರಿದಂತೆ ಹಲವರು ಇದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";