ಕೋವಿಡ್-19 ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಿ: ಸಚಿವ ಎನ್.ನಾಗರಾಜು

ದೇವನಹಳ್ಳಿ: ಕೋವಿಡ್-19 ಸೋಂಕು ಜಿಲ್ಲೆಯಲ್ಲಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋವಿಡ್-19 ಸಮರ್ಪಕ ನಿರ್ವಹಣೆಗೆ ಸರ್ಕಾರದೊಂದಿಗೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕೆಂದು ಪೌರಾಡಳಿ ಮತ್ತು ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪಿ.ಎಂ.ಕೇರ್ ಯೋಜನೆಯಡಿ ದೇವನಹಳ್ಳಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಪಿ.ಎಸ್.ಎ(ಆಕ್ಸಿಜನ್) ಘಟಕ ಹಾಗೂ ತಾಯಿ ಮತ್ತು ಮಕ್ಕಳ 100 ಹಾಸಿಗೆಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸಿ, ಅವರು ಮಾತನಾಡಿದರು.
ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮತ್ತು ಹಾಸಿಗೆಗಳ ಕೊರತೆ ಉಂಟಾದ ಹಿನ್ನೆಲೆ, ಎಲ್ಲಾ ಜಿಲ್ಲೆಗಳಲ್ಲಿಯೂ ಆಕ್ಸಿಜನ್ ಘಟಕಗಳನ್ನು ನಿರ್ಮಿಸುವ ಉದ್ದೇಶದಿಂದ ಪಿ.ಎಂ. ಕೇರ್ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.


ಇದುವರೆಗೂ ದೇಶದಲ್ಲಿ 80 ಕೋಟಿ ಲಸಿಕೆ ವಿತರಣೆಯಾಗಿದ್ದು, ರಾಜ್ಯವು ಲಸಿಕೆ ವಿತರಣೆಯಲ್ಲಿ ಮುಂಚೂಣಿಯಲ್ಲಿದೆ. ಅದರಂತೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿನಿತ್ಯ 6 ರಿಂದ 7 ಸಾವಿರ ಲಸಿಕೆ ಪೂರೈಕೆಯಾಗುತ್ತಿದ್ದು, ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ರಮ ಉತ್ತಮವಾಗಿ ನಡೆಯುತ್ತಿದೆ ಎಂದರು.
ಕೋವಿಡ್-19 ನಿಂದ ಮೃತ ಪಟ್ಟ ಬಿ.ಪಿ.ಎಲ್. ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ. 1 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ ರೂ. 50 ಸಾವಿರಗಳ ಪರಿಹಾರವನ್ನು ನೀಡಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಕೋವಿಡ್‌ನಿಂದ ಮರಣ ಹೊಂದಿದವರ ತಾಲ್ಲೂಕುವಾರು
ಮಾಹಿತಿಯನ್ನು ಸಂಗ್ರಹಿಸಬೇಕು ಹಾಗೂ ಸಾರ್ವಜನಿಕರು ಕೋವಿಡ್ ಮೂರನೇ ಅಲೆಯ ಬಗ್ಗೆ ಎಚ್ಚರಿಕೆ ವಹಿಸಿ,
ಸಭೆ, ಸಮಾರಂಭಗಳಲ್ಲಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದರು.


ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಮಾತನಾಡಿ ದೇವನಹಳ್ಳಿ ಮತ್ತು ವಿಜಯಪುರ ರಸ್ತೆಗಳು ಹದಗೆಟ್ಟಿದ್ದು, ಅವುಗಳ ಅಭಿವೃದ್ಧಿ ಮಾಡಬೇಕಿದೆ ಹಾಗೂ ತಾಲ್ಲೂಕು ಆಸ್ಪತ್ರೆಯೂ ಶಿಥಿಲಗೊಂಡಿದ್ದು, 500 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲು ಅನುವು ಮಾಡಿಕೊಡಬೇಕೆಂದರಲ್ಲದೆ, ವಿಜಯಪುರ ಪುರಸಭೆಗೆ ಆರ್ಥಿಕ ಆದಾಯದ ಕೊರತೆ ನೀಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.
ರಾಷ್ಟ್ರೀಯ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ರೂ. 9.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಕೋವಿಡ್ ಸಂದರ್ಭದಲ್ಲಿ ಉತ್ತಮ ರೀತಿಯ ವೈದ್ಯಕೀಯ ಸೌಲಭ್ಯ ಒದಗಿಸಲು ನೆರವಾಗಿದ್ದು, ಮುಂದಿನ ದಿನಗಳಲ್ಲಿ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಕೃಷಿಕರಿಗೆ ಆರೋಗ್ಯ ಸೌಲಭ್ಯ ತಲುಪಿಸಿ, ಅಭಿವೃದ್ಧಿ ಪಥಕ್ಕೆ ಕೊಂಡ್ಯೊಯ್ಯಬೇಕಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಪುರಸಭೆ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಉಪಾಧ್ಯಕ್ಷೆ ಪುಷ್ಪಲತಾ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ||ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ||ಎ.ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಸಂಜಯ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಯಲಕ್ಷ್ಮಿ, ಡಿವೈಎಸ್ಪಿ ಉಮಾಶಂಕರ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಗಳಾದ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಬಹುಮಾನ ವಿತರಿಸುವ ಮೂಲಕ ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ನವೀಕರಣಗೊಂಡಿರುವ ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯನ್ನು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜ್ (ಎಂ.ಟಿ.ಬಿ) ಅವರು ಉದ್ಘಾಟಿಸಿದರು.

Leave a Comment

Your email address will not be published. Required fields are marked *

Translate »
Scroll to Top