ಬೆಂಗಳೂರು,ಡಿ,೨೬ : ಹೊಸ ವರ್ಷಾಚರಣೆಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಇದರ ಮಧ್ಯೆ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದೆ. ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ರಾಜ್ಯದಾದ್ಯಂತ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ. ಡಿ.೨೮ರಿಂದ ೧೦ ದಿನಗಳ ಕಾಲ ರಾತ್ರಿ ೧೦ ಗಂಟೆಯಿಂದ ಬೆಳಗ್ಗೆ ೫ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.೫೦ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.೫೦ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ, ಸಿನಿಮಾ ಥಿಯೇಟರ್‌ಗಳಿಗೆ ಸದ್ಯ ಈ ನಿಮಯ ಅನ್ವಯವಾಗುವುದಿಲ್ಲ ಎಂದು ತಿಳಿಸಿದೆ.