ತುಮಕೂರು : ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸಲುವಾಗಿ ಮಾರ್ಚ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾದ್ಯಂತ ಏಕಕಾಲದಲ್ಲಿ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರು ಕೇಂದ್ರಸ್ಥಾನಕ್ಕೆ ಸಮೀಪವಿರುವ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಪ್ರಮುಖವಾಗಿ ಪರಿಶಿಷ್ಟ ಜಾತಿ/ ಪಂಗಡದ ಜನಾಂಗದವರು ವಾಸಿಸುವ ಕಾಲೋನಿಯ ರೈತರ ಮನೆ-ಮನೆಗೆ ಭೇಟಿ ನೀಡಿ ಕಂದಾಯ ದಾಖಲೆಗಳನ್ನು ಸಚಿವರು ಮುದ್ದಾಂ ವಿತರಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸಲಾಗುವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಯಶಸ್ವಿಯಾಗಿ ನಡೆಸಬೇಕು ಎಂದರು.
ರಾಜ್ಯದ ಎಲ್ಲಾ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಏಕಕಾಲದಲ್ಲಿ ಪ್ರಾರಂಭಿಸಲಾಗುವುದು. ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂದು ಬೆಳಿಗ್ಗೆ ೧೧ ಗಂಟೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ರೈತರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲು ಕಂದಾಯ ಸಿಬ್ಬಂದಿಗಳಾದ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು, ಉಪತಹಶೀಲ್ದಾರ್, ತಹಶೀಲ್ದಾರ್, ಉಪವಿಭಾಗಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಅಗತ್ಯವಿದ್ದಲ್ಲಿ ಇತರೆ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಂದಾಯ ದಾಖಲೆಗಳನ್ನು ರೈತರಿಗೆ ಮುದ್ದಾಂ ತಲುಪಿಸಿರುವ ಬಗ್ಗೆ ಪ್ರತ್ಯೇಕ ವಹಿಯಲ್ಲಿ ಸ್ವೀಕೃತಿ ಪಡೆದು ಕಡ್ಡಾಯವಾಗಿ ರೈತರ ದೂರವಾಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಕಾರ್ಯಕ್ರಮವನ್ನು ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಎಲ್ಲಾ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಮೋಹನ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.