ದಾವಣಗೆರೆ: ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯಲ್ಲಿ ನಿರ್ದಿಷ್ಟವಾಗಿ ಆಯಾ ಸಮುದಾಯಕ್ಕೆ ಮೂಲಭೂತ ಸೌಕರ್ಯ ತಲುಪುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಹೇಳಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೌಲಭ್ಯ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದರ ಕುರಿತು ಕೇವಲ ಮಾತನಾಡದೆ ಕಾರ್ಯ ರೂಪದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಅನುದಾನವನ್ನು ಸೂಕ್ತ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಕಲ್ಪಿಸಿ, ತುಳಿತಕ್ಕೊಳಗಾದ ಸಮುದಾಯಗಳ ಕೆಲಸ ಮಾಡುವುದರಿಂದ ಪುಣ್ಯ ಬರುತ್ತದೆ ಇಂತಹ ಕೆಲಸಗಳನ್ನು ಕಳಕಳಿಯಿಂದ ಮಾಡಿ ಎಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯಲ್ಲಿ ತಮ್ಮ ತಮ್ಮ ಇಲಾಖೆಗಳಲ್ಲಿ ನಡೆದಿರುವ ಪ್ರಗತಿಪರಿಶೀಲನಾ ವರದಿಯನ್ನು ಒಪ್ಪಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ ಮುದ್ದಜ್ಜಿ, ಪಶು ಸಂಗೊಪನಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ಸುಂಕದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್, ನಗರಾಭಿವೃದ್ದಿ ಕೋಶದ ನಜ್ಮಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.