ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ನಲಚೆರವು ಪ್ರದೇಶದ ಬಳಿ 14ಎಕರೆ ವಿಶಾಲ ಮೈದಾನದಲ್ಲಿ ನಿರ್ಮಿಸಲಾಗುತ್ತಿರುವ ನಲ್ಲಚೆರವು ಕೆರೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ನಂತರ ಸಚಿವರು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿಂಥೆಟಿಕ್ ಟ್ರ್ಯಾಕ್, ಹಾಕಿ ಟರ್ಫ್ ಕಾಮಗಾರಿ ಹಾಗೂ ಇನ್ನೀತರ ಕಾಮಗಾರಿಗಳನ್ನು ಪರಿಶೀಲಿಸಿದರು. ಇದಾದ ನಂತರ ಈಜುಕೋಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಮತ್ತು ಈಜುಕೋಳದಲ್ಲಿ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದವರೊಂದಿಗೆ ಮಾತುಕತೆ ನಡೆಸಿದರು. ನಂತರ ಬ್ಯಾಡ್ಮಿಂಟನ್ ಕೋರ್ಟ್ ಗೆ ಭೇಟಿ ನೀಡಿ ಬ್ಯಾಡ್ಮಿಂಟನ್ ಆಟದಲ್ಲಿ ನಿರತರಾದವರೊಂದಿಗೆ ಮಾತನಾಡಿದರು ಮತ್ತು ಸ್ವತಃ ಅವರೇ ಬ್ಯಾಡ್ಮಿಂಟನ್ ಆಟವಾಡಿದ್ದು ವಿಶೇಷವಾಗಿತ್ತು.
ಜಿಲ್ಲಾ ಕ್ರೀಡಾಂಗಣ, ಈಜುಕೋಳ,ಬ್ಯಾಡ್ಮಿಂಟನ್ ಕೋರ್ಟ್ ನಿರ್ವಹಣೆ ಚೆನ್ನಾಗಿ ಮಾಡಲಾಗುತ್ತಿದೆ. ಏನಾದರೂ ಸಣ್ಣಪುಟ್ಟ ದುರಸ್ತಿಗಳಿದ್ದರೇ ಮಾಡಿಸಿಕೊಳ್ಳುವಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಠೋಡ ಅವರಿಗೆ ಸಚಿವ ಶ್ರೀರಾಮುಲು ಸೂಚನೆ ನೀಡಿದರು. ಸರಿಯಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಸೇರಿದಂತೆ ಇನ್ನೀತರರು ಇದ್ದರು.