ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಸುಮಾರು 10 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದಿದೆ.
ಇಂದು ಮಧ್ಯಾಹ್ನ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಇನ್ನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದು, ಈ ಪೈಕಿ ಮೃತರು ಬಳ್ಳಾರಿ ಜಿಲ್ಲೆಯ ಸಂಗನಕಲ್ ನಿವಾಸಿಗಳಾಗಿದ್ದು, ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಚಾಮರಾಜನಗರಕ್ಕೆ ಹೋಗಿದ್ದರು ಎನ್ನಲಾಗಿದೆ.
ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (32), ಪುನೀತ್ (7), ಶಶಿಕುಮಾರ್(30) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಉಳಿದಂತೆ ಮೃತರನ್ನು ಮಂಜುನಾಥ್(35), ಪೂರ್ಣಿಮ (30), ಕಾರ್ತಿಕ್ (8), ಪವನ್ (7), ಗಾಯತ್ರಿ (28), ಶ್ರಾವ್ಯ (5), ಕೊಟ್ರೇಶ್ (45), ಸುಜಾತ (40), ಸಂದೀಪ್ (23) ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಕುರುಬೂರು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.