ಬೆಂಗಳೂರು: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಶುಭ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.
ಈಗಾಗಲೇ ಐದು ಗ್ಯಾರಂಟಿ ಯೋಜನೆ ಸೇರಿದಂತೆ ಪ್ರಣಾಳಿಕೆಯಲ್ಲಿ ನೀಡಿರುವ ಇತರೆ ವಾಗ್ದಾನಗಳನ್ನು ಈಡೇರಿಸುವ ಸಂಬಂಧ ಮುಖ್ಯಮಂತ್ರಿ, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ವಿವರವಾಗಿ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಯಾವ ರೀತಿ ಜಾರಿಗೆ ತರಬೇಕು. ಫಲಾನುಭವಿಗಳ ಆಯ್ಕೆ ಮಾನದಂಡ ಹಾಗೂ ಸರ್ಕಾರದ ಮೇಲೆ ಬೀಳಬಹುದಾದ ಆರ್ಥಿಕ ಹೊರೆ ಮುಂತಾದ ಪ್ರಮುಖ ವಿಚಾರಗಳನ್ನು ನಾಳಿನ ಸಂಪುಟ ಸಭೆಯಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷ ಚುನಾವಣಾ ಹೊತ್ತಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ೨ ಸಾವಿರ ನೀಡುವ ಗೃಹ ಲಕ್ಷ್ಮಿ ಯೋಜನೆ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ, ಪ್ರತಿಕುಟುಂಬಕ್ಕೆ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಅನ್ನಭಾಗ್ಯ ಅಡಿ ಪ್ರತಿಯೊಬ್ಬರಿಗೂ ೧೦ ಕೆಜಿ ಉಚಿತ ಅಕ್ಕಿ, ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಕಳೆದ ೪ ದಿನಗಳಿಂದ ಅಧಿಕಾರಿಗಳ ಜತೆ ಹಾಗೂ ಸಚಿವರ ಜತೆ ಪ್ರತ್ಯೇಕ ಸಭೆಗಳಲ್ಲಿ ಸಮಾಲೋಚನೆ ನಡೆಸಿದ್ದರು. ನಾಳೆ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳನ್ನು ಘೋಷಿಸಲಿದ್ದಾರೆ.
ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗುತ್ತದೋ ಇಲ್ಲ ಮೊದಲಿಗೆ ಮೂರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ನಂತರ ಹಂತ ಹಂತವಾಗಿ ಉಳಿದ ಯೋಜನೆಗಳ ಅನುಷ್ಠಾನ ಮಾಡಲಾಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗಳನ್ನು ಮಾಡಿಯೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ನಾಳೆ ನಡೆಯುವ ಸಂಪುಟ ಸಭೆಯಲ್ಲೂ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡು ಯೋಜನೆಗಳ ಅನುಷ್ಠಾನ ಪ್ರಕಟಿಸುವುದು ಬಹುತೇಕ ಖಚಿತ
ಮೊದಲ ಹಂತದಲ್ಲಿ ಉಚಿತ ಬಸ್ ಪ್ರಯಾಣದ ಶಕ್ತಿ, ಉಚಿತ ವಿದ್ಯುತ್ ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಿ ಉಳಿದ ಯೋಜನೆಗಳಾದ ಯುವ ನಿಧಿ ಮತ್ತು ಗೃಹ ಲಕ್ಷ್ಮಿಯನ್ನು ಮುಂದಿನ ದಿನಗಳಲ್ಲಿ ಉಳಿದ ಗ್ಯಾರೆಂಟಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಲಿವೆ.