ನಂಜುಂಡಪ್ಪ.ವಿ.
ಬೆಂಗಳೂರು: ರಾಜ್ಯದಲ್ಲಿ 2024 ರ ವರ್ಷ ಹಗರಣಗಳ ವರ್ಷವಾಗಿ ಪರಿವರ್ತನೆಯಾಗಿದ್ದು, ಭಾರೀ ಆರೋಪ – ಪ್ರತ್ಯಾರೋಪಗಳಿಗೆ ನಾಂದಿಯಾಯಿತು. ಹಗರಣಗಳ ಹಿನ್ನೆಲೆಯಲ್ಲಿ ರಾಜಭವನ ಚರ್ಚೆಯ ಕೇಂದ್ರವಾಗಿ ಮಾರ್ಪಟ್ಟಿತು. ಈ ಹಗರಣಗಳ ಬಗ್ಗೆ ಇಡಿ, ಲೋಕಾಯುಕ್ತ, ಎಸ್.ಐ.ಟಿ ತನಿಖೆಗಳು ನಡೆಯುತ್ತಿವೆ.ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರೆ, ರಾಜ್ಯಪಾಲರು ಕಾನೂನು ಬದ್ಧವಾಗಿದ್ದಾರೆ ಎಂದು ಬಿಜೆಪಿ ನಾಯಕರು ಬಲವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನಗಳ ಹಂಚಿಕೆ ಹಗರಣ ಭಾರೀ ಸದ್ದು ಮಾಡಿದವು. ಕೋವಿಡ್ ಕಾಲದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಬಿಜೆಪಿ ಮುಖಂಡ, ಸಂಸದ ಡಾ.ಕೆ. ಸುಧಾಕರ್ ಸುತ್ತ ಹಗರಣ ಗಿರಕಿ ಹೊಡೆಯುತ್ತಿದೆ. ಇದು ಯಾವ ಹಂತ ತಲುಪುತ್ತದೆಯೋ ಎಂಬ ಕೌತುಕ ಮನೆ ಮಾಡಿದೆ.
ಮುಡಾ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ವಿರುದ್ಧವೇ ಆರೋಪ ಕೇಳಿ ಬಂತು. ಸಿದ್ದರಾಮಯ್ಯಅವರ ಪತ್ನಿಗೆ ಮೈಸೂರಿನ ಪ್ರಮುಖ ಪ್ರದೇಶದಲ್ಲಿ 14 ವಸತಿ ನಿವೇಶನಗಳನ್ನು ಮಂಜೂರು ಮಾಡಿತ್ತು ಎಂಬುದು ಪ್ರಮುಖ ಆರೋಪ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಹಾಗೂ ಅವರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಪ್ರಕರಣದ ತನಿಖೆಯಲ್ಲಿ ತೊಡಗಿದೆ. ಮುಖ್ಯಮಂತ್ರಿವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ ಬಳಿಕ ನಿವೇಶನಗಳನ್ನು ವಾಪಸ್ ನೀಡಲಾಗಿದ್ದು, ಈ ಬೆಳವಣಿಗೆಗಳು ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ, ಬಿಜೆಪಿ-ಜೆಡಿಎಸ್ ಪಕ್ಷಗಳು ಜಂಟಿಯಾಗಿ 8 ದಿನಗಳ ’ಮೈಸೂರು ಚಲೋ’ ಪಾದಯಾತ್ರೆ ನಡೆಸಿದವು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪಾದಯಾತ್ರೆಗೆ ಕೆಂಗೇರಿಯಲ್ಲಿ ಆಗಸ್ಟ್ 3 ರಂದು ಚಾಲನೆ ನೀಡಿದರು. ಮೈಸೂರು ಚಲೋ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೆಂಗಳೂರು ಮತ್ತು ಮೈಸೂರು ಭಾಗದಲ್ಲಿ ಜನಾಂದೋಲನ ಯಾತ್ರೆಗಳನ್ನು ನಡೆಸಿತು.
ಮೂಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಕುರಿತು ತನಿಖೆ ನಡೆಸಲು ರಾಜ್ಯಪಾಲ ಥಾವರ್‌ಚಂದ್ಗೆ ಹ್ಲೋಟ್ ಆಗಸ್ಟ್ 17 ರಂದು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದರು. ಟಿ.ಜೆ. ಅಬ್ರಹಾಂ, ಪ್ರದೀಪ್ ಹಾಗೂ ಸ್ನೇಹಮಯಿ ಕೃಷ್ಣ ಎಂಬುವರು ಸಲ್ಲಿಸಿದ್ದ ಮೂರು ಅರ್ಜಿಗಳನ್ನು ಪರಿಗಣಿಸಿ ಅನುಮತಿ ನೀಡಿದರು. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿತು.
ರಾಜ್ಯಪಾಲರು ದಾವೆ ಹೂಡಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿತು. ವಿಚಾರಣೆಗೆ ತಡೆ ನೀಡುವಂತೆ ಕೋರಿ ಮುಖ್ಯಮಂತ್ರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ರಾಜ್ಯಪಾಲರು ವಿಚಾರಣೆಗೆ ನೀಡಿದ ಅನುಮತಿ ಕ್ರಮಬದ್ಧವಾಗಿದೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿತು.
ಮಹರ್ಷಿ ವಾಲ್ಮೀಕಿ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ನಂತರ ಹಗರಣ ಬಯಲಿಗೆ ಬಂತು. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ಹಣಕಾಸು ಇಲಾಖೆ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಯುತ್ತಿದೆ.
ಒಂದೆಡೆ ಮುಡಾ ಹಗರಣ ಕುರಿತು ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳ ಕುರಿತಂತೆ ಎಸ್‌ಐಟಿ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಕ್ಟೋಬರ್ 14 ರಂದು ನಿರ್ಧಾರ ಕೈಗೊಂಡಿತು.
ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ. ವಿಷ್ಣುಪ್ರಸಾದ್ ನೀಡಿರುವ ದೂರಿನ ಮೇರೆಗೆ ಕೋವಿಡ್ ಭ್ರಷ್ಟಾಚಾರ ಕುರಿತು ಡಿಸೆಂಬರ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಮೇಲೆ ಎಫ್.ಐ.ಆರ್ ದಾಖಲಾಯಿತು. ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಧಿಯಲ್ಲಿನ ಅಕ್ರಮಗಳ ಬಗ್ಗೆ ಇದೀಗ ಹೆಡೆಮುರಿ ಕಟ್ಟುವ ನಿರ್ಣಾಯಕ ಕ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೈ ಹಾಕಿದೆ. ಈ ಮೂಲಕ ಪ್ರಕರಣವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿ ಹಲವರಲ್ಲಿ ಢವಢವ ಶುರುವಾಗಿದೆ.