ರಾಯಚೂರು: ಕೃಷಿ ಇಲಾಖೆ, ನೀರಾವರಿ ಇಲಾಖೆ ಮತ್ತು ಜೆಸ್ಕಾಂ ಇಲಾಖೆಗಳು ಸರಿಯಾದ ರೀತಿಯಲ್ಲಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವ ಹಿಸದಾಗ ಮಾತ್ರ ಜಿಲ್ಲೆಯಲ್ಲಿ ಕೃಷಿ ಚಟುವಟಿ ಕೆಗಳು ಉತ್ತಮವಾಗಿ ನಡೆಯಲಿವೆ ಆದ್ದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಸ್ಥಳ ಪರಿಶೀಲನೆ ಮಾಡುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಸಣ್ಣ ನೀರವಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಜಿಲ್ಲಾ ಪಂಚಾ ಯತ್ ಸಭಾಂಗಣ ದಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಆರಂಭವಾಗುವ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭ ವಾಗುತ್ತಿದ್ದು, ಕೃಷಿ ಇಲಾಖೆಯಿಂದ ರೈತರಿಗೆ ಬೇಡಿಕೆಗಾನುಸಾರವಾಗಿ ಬಿತ್ತನೆ ಬೀಜ, ರಸಗೊಬ್ಬರಗಳ ಪೂರೈಕೆಯಾಗಬೇಕು, ಮತ್ತು ರೈತರಿಗೆ ಮತ್ತು ಸಾರ್ವಜನಿಕರಲ್ಲಿರುವ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ರೀತಿಯಲ್ಲಿ ಸ್ಪಂಧಿಸಬೇಕು ಎಂದರು.
ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜದ ಬ್ರಾಂಡ್ಗಳನ್ನೇ ರೈತರಿಗೆ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ವಿತರಣೆ ಮಾಡುವಲ್ಲಿ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜೆಸ್ಕಾಂ ಇಲಾಖೆಯಿಂದ ಗ್ರಾಮೀಣ ಭಾಗ ದಲ್ಲಿ ಸರಿಯಾದ ರೀತಿಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ನೀಡಬೇಕು ಮತ್ತು ವಿದ್ಯುತ್ ಸಂಬಂಧಿಸಿದ ದೂರುಗಳಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆ ಬಗೆಹರಿಸುವಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿ ಸಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ವಿದ್ಯುತ್ ಪರಿವರ್ತಕಗಳ ಸಮಸ್ಯೆಯಾಗದಂತೆ ನಿಗಾವಹಿಸಬೇಕು. ಪರಿವರ್ತಕಗಳು ಕೆಟ್ಟು ಹೋದ ಬಗ್ಗೆ ದೂರುಗಳು ಬಂದಾಗ ಸರಿಯಾದ ರೀತಿಯಲ್ಲಿ ಸ್ಪಂದಿಸಿ ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಳ್ಳಿಗ ಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆಯಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಬೇಕು ಮತ್ತು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತವಾಗುವ ಸಾಧ್ಯಗಳು ಕಂಡುಬಂದಲ್ಲಿ ಅಧಿಕಾರಿಗಳು ಕೂಡಲೇ ಪೈಪ್ಲೈನ್ಗಳನ್ನು ಪರಿಶೀಲಿಸಿ ಒಡೆದು ಹೋದ ಪೈಪ್ಲೈನ್ಗಳನ್ನು ಸರಿಪಡಿಸಬೇಕು, ಜಲಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳ ಕುಡಿಯುವ ನೀರಿನ ಸೌಲಭ್ಯಗಳನ್ನು ಪರಿಶೀಲನೆ ನಡೆಸಿ ಗುಣಮಟ್ಟದ ಕಾಮ ಗಾರಿಯಾಗದಿದ್ದಲ್ಲಿ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಮಳೆಗಾಲದಲ್ಲಿ ನಗರದ ಸಿಯಾತಲಾಬ್, ಜಲಾಲ್ನಗರ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗುವ ಪರಿಸ್ಥಿತಿ ನಿರ್ಮಾಣವಾಗುತ್ತವೆ ಆದ್ದರಿಂದ ನಗರದ ಅನೇಕ ಬಡಾವಣೆ ಗಳಲ್ಲಿನ ರಾಜಕಾಲುವೆಗಳು ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಂಡು ಶಾಶ್ವತ ಪರಿಹಾರ ಒದಗಿಸು ವಂತೆ ಸೂಚನೆ ನೀಡಿದರು.
ಮುಂದಿನ ತಿಂಗಳಿನಿಂದ ಪ್ರತಿ ಕುಟುಂ ಬಕ್ಕೆ ತಲಾ ೧೦ ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರದಿಂದ ಆದೇಶವಾಗಿದ್ದು, ಮುಂದಿನ ತಿಂಗಳಿನಿಂದ ಅಕ್ಕಿ ವಿತರಣೆ ಆಗಬೇಕು ಎಂದು ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಆ.೧೫ರಿಂದ ಜಿಲ್ಲೆಯ ಎಲ್ಲಾ ಕುಟುಂಬದ ಯಜಮಾನಿಯರಿಗೆ ಎರಡು ಸಾವಿರ ರೂ. ಜಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಕಾದ ಮೂಲ ಸೌಕರ್ಯ ಗಳ ಕೊರತೆ ಹಾಗೂ ಆರೋಗ್ಯ ಕೇಂದ್ರ ಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಎಲ್ಲಾ ಇಲಾಖೆಯ ಅಧಿಕಾರಿಗಳು ವ್ಯವಸ್ಥಿತವಾಗಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸದಾಗ ಮಾತ್ರ ಆಡಳಿತ ವ್ಯವಸ್ಥೆ ಉತ್ತಮವಾಗಿರುತ್ತದೆ ಆದ್ದರಿಂದ ತಮ್ಮ ತಮ್ಮ ಇಲಾಖೆಗಳಲ್ಲಿ ಅಧಿಕಾರಿಗಳು ಕಾರ್ಯಕ್ಷಮತೆಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಲಿಂಗಸುಗೂರು ಸಹಾಯಕ ಆಯುಕ್ತ ಶಿಂಧೆ ಅವಿನಾಶ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅಪರ್ಣಾ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ರಾಯಚೂರು ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.