ಬಳ್ಳಾರಿ: ನಾನಿನ್ನು ರಾಜ್ಯಾದ್ಯಕ್ಷರ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ. ಮಾಧ್ಯಮದಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.
ಬಳ್ಳಾರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ನೈತಿಕ ಹೊಣೆ ಹೊತ್ತಿದ್ದೇನೆ. ಸೋಲಿನ ಬಗ್ಗೆ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. ನಾಲ್ಕು ವರ್ಷಗಳಿಂದ ಅಧ್ಯಕ್ಷನಾಗಿ ಎರಡು ಅವಧಿಯನ್ನು ಪೂರ್ಣಗೊಳಿಸಿದ್ದೇನೆ. ಅವಧಿ ಪೂರ್ಣಗೊಂಡ ನಂತರ ಅಧ್ಯಕ್ಷರ ಬದಲಾವಣೆ ಮಾಡುವುದು ಸಹಜ ಪ್ರಕ್ರಿಯೆ. ಈ ಹಿನ್ನೆಲೆಯಲ್ಲಿ ವಸತಿ ಸಚಿವರಾಗಿದ್ದ ಸೋಮಣ್ಣನವರು ರಾಜ್ಯಾಧ್ಯಕ್ಷರ ಸ್ಥಾನ ಕೇಳುವುದು ತಪ್ಪೇನಿಲ್ಲ. ಆದರೆ ಇದನ್ನು ತೀರ್ಮಾನಿಸುವುದು ನಮ್ಮ ಹೈಕಮಾಂಡ್ ಎಂದು ಕಟೀಲ್ ಹೇಳಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಆದರೆ ಈಗಾಗಲೇ ಮಾಧ್ಯಮಗಳಲ್ಲಿ ರಾಜಿನಾಮೆ ನೀಡಿದ್ದೇನೆ ಎಂಬುದಾಗಿ ಸುದ್ದಿಗಳು ಬರುತ್ತಿವೆ. ಆದರೆ ನಾನು ರಾಜ್ಯಾಧ್ಯಕ್ಷರ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಘಿದೆ ಎಂದು ವಿವರಿಸಿದರು.
ಕಾಂಗ್ರೆಸ್ ನೀಡಿದ್ದ ಉಚಿತ ಘೋಷಣೆಗಳಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಭ್ರಮೆಯಲ್ಲಿ ಕಾಂಗ್ರೆಸ್ಸಿಗರು ಇದ್ದಾರೆ. ಉಚಿತ ಘೋಷಣೆಗಳಿಂದ ದೇಶದಲ್ಲಿ ಸರ್ಕಾರ ರಚನೆ ಮಾಡುವುದು ಸುಳ್ಳು. ಕೇವಲ ಮತಬ್ಯಾಂಕ್ ಭದ್ರಪಡಿಸಿಕೊಳ್ಳಲು ಈ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಗೋಹತ್ಯಾ ನಿಷೇಧ ಕಾಯ್ದೆಯ ಬಗ್ಗೆ ಮಾತನಾಡಿದ ಕಟೀಲ್ ಅವರು, ಈ ಕಾಯ್ದೆಯನ್ನು ಜಾರಿ ಮಾಡಿದ್ದು, ನಮ್ಮ ಬಿಜೆಪಿ ಸರ್ಕಾರ. ಯಾರೇ ಇದನ್ನು ವಿರೋಧಿಸಿ ಗೋ ಹತ್ಯೆ ಮಾಡಿದಲ್ಲಿ ಅವರಿಗೆ ಶಿಕ್ಷೆ ಆಗಲಿದೆ. ಆದರೆ ಕಾಂಗ್ರೆಸ್‌ನವರು ಕಾಯ್ದೆಗಳನ್ನು ವಾಪಾಸ್ಸು ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಿರುವುದು ಸಮಂಜಸವಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ನಗರ ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ, ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಮುರಹರಗೌಡ, ಸಿರುಗುಪ್ಪ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.