ಸರ್ವ ಜನಾಂಗದ ಶಾಂತಿಯ ತೋಟ ಕುಡುಕರ ತೋಟ ಮಾಡುತ್ತಿದೆ ಎಂದು ಕಿಡಿ
ಗೃಹಜ್ಯೋತಿ ಎಂದ ಸರಕಾರ ನಾರಿಯರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ!!
ಬೆಂಗಳೂರು : ಮನೆಮನೆಗೂ ಮದ್ಯಭಾಗ್ಯ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕವನ್ನು ಕುಡುಕರ ತೋಟವನ್ನಾಗಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬಕಾರಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಹಳ್ಳಿಯಲ್ಲೂ ಬಾರ್ ಮದ್ಯದ ಅಂಗಡಿ ತೆರೆಯುವುದು, ಸೂಪರ್ ಮಾರ್ಕೆಟ್ ಗಳಲ್ಲೂ ಮದ್ಯ ಮರಾಟಕ್ಕೆ ಅವಕಾಶ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದ್ದಾರೆ.
ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು; ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು! ಕಾರಣವಿಷ್ಟೇ; ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ!! ಚುನಾವಣೆಗೆ ಮುನ್ನ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ.
ಇದು ರಾಜ್ಯ ಕಾಂಗ್ರೆಸ್ ಸರಕಾರದ ಸಂಕಲ್ಪವಾಗಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ!! ಎಂದು ಅವರು ಲೇವಡಿ ಮಾಡಿದ್ದಾರೆ.
ಖೊಟ್ಟಿ ಗ್ಯಾಟಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ? ಎಂದು ಖಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೇ ಟಾಂಗ್ ಕೊಟ್ಟಿದ್ದಾರೆ.
3,000 ಜನಸಂಖ್ಯೆಯುಳ್ಳ ಪ್ರತೀ ಗ್ರಾಮ, ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ ಎಂದು ಅವರು ಹೇಳಿದ್ದಾರೆ.
ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.