ಪ್ರಸಿದ್ಧ ಅಂಜನಾದ್ರಿಗೆ ಬರುವ ಲಕ್ಷಾಂತರ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ – ಸಚಿವ ಶಿವರಾಜ್ ಎಸ್.ತಂಗಡಗಿ

Kannada Nadu
ಪ್ರಸಿದ್ಧ ಅಂಜನಾದ್ರಿಗೆ ಬರುವ ಲಕ್ಷಾಂತರ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ – ಸಚಿವ ಶಿವರಾಜ್ ಎಸ್.ತಂಗಡಗಿ

ಕೊಪ್ಪಳ : ಹನುಮಮಾಲಾ ವಿಸರ್ಜನೆ ಕಾರ್ಯಕ್ರಮದ ನಿಮಿತ್ತ ಪ್ರಸಿದ್ಧ ಅಂಜನಾದ್ರಿಗೆ ಹನುಮಮಾಲಾಧಾರಿಗಳು ಸೇರಿದಂತೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದರಿಂದ ಜನಸಂದಣಿ ಹೆಚ್ಚಾಗುವ ಸಾದ್ಯತೆ ಇದೆ. ಅದನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ಗಂಗಾವತಿ ನಗರಸಭೆ ಆವರಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಡಿಸೆಂಬರ್ 2 ಮತ್ತು 3 ರಂದು ಅಂಜನಾದ್ರಿಯಲ್ಲಿ ಜರುಗಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೇಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 2 ಮತ್ತು 3 ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಬೇಕು. ಪ್ರತಿಯೊಂದು ಸಮಿತಿಯ ಅಧಿಕಾರಿಗಳು ಅಂದು ಕಡ್ಡಾಯವಾಗಿ ಕಾರ್ಯಕ್ರಮದ ಸ್ಥಳದಲ್ಲಿದ್ದು, ಕಾರ್ಯನಿರ್ವಹಿಸಬೇಕು. ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಚಾಚು ತಪ್ಪದೇ ಪಾಲನೆ ಮಾಡಬೇಕು. ಸಮಿತಿಗೆ ಒಪ್ಪಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸಮಿತಿಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಆಹಾರ ವ್ಯವಸ್ಥೆಯು ಅಚ್ಚುಕಟ್ಟಾಗಿ ನಡೆಯಬೇಕು. ಪ್ರಸಾದವನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿಯೇ ವಿತರಣೆ ಮಾಡಬೇಕು. ಪ್ರಸಾದ ನಿಲಯ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಭದ್ರತೆಗಾಗಿ ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಬೇಕು. ಪ್ರಮುಖ ವೃತಗಳಲ್ಲಿ ವಿಡಿಯೋಗ್ರಾಫಿ ನಡೆಸಿ ಜನರ ಚಲನವಲನ ಮೇಲೆ ನಿಗಾವಹಿಸಬೇಕು. ಶೋಭಾಯಾತ್ರೆಯಿಂದ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಪೂರ್ಣವಾಗುವವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದರು.
ಯಾವುದೇ ಕಡೆಗಳಲ್ಲಿ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಸೂಕ್ತ ವಿದ್ಯುತ್ ಪೂರೈಕೆ ಮಾಡಬೇಕು. ಅಗ್ನಿ ಅನಾಹುತಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ಈ ಹಿನ್ನೆಲೆಯಲ್ಲಿ ಜೆಸ್ಕಾಂ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಅಗತ್ಯ ಕ್ರಮ ವಹಿಸಬೇಕು. ಆರೋಗ್ಯದ ವಿಚಾರದಲ್ಲಿ ತುಂಬಾ ಮುಂಚುಣೆಯಲ್ಲಿರಿ, ಮೆಟ್ಟಿಲುಗಳನ್ನು ಹತ್ತುವಾಗ ಮದ್ಯದಲ್ಲಿ, ಗ್ಲುಕೋಸ್, ನೀರು ಸೇರಿದಂತೆ ಅಗತ್ಯವಾದ ವಸ್ತುಗಳನ್ನು ದಿನದ 24 ಗಂಟೆಗಳ ಕಾಲ ವಿತರಣೆಯಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಅಂಜನಾದ್ರಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ಜಗಮಗಿಸುವ ಹಾಗೆ ಎಲ್ಲಾ ಕಡೆಗಳಲ್ಲಿ ವಿದ್ಯೂದೀಪಾಲಂಕಾರ ಮಾಡಬೇಕು. ಬೆಟ್ಟದ ಸುತ್ತಲಿನ ರಸ್ತೆಗಳನ್ನು ತಳಿರು ತೋರಣಗಳಿಂದ ಶೃಂಗರಿಸಬೇಕು. ದೂರದಿಂದ ನಡೆದು ಬರುವ ಭಕ್ತರಿಗೆ ವಿರಮಿಸಲು ಅಲ್ಲಲ್ಲಿ ಟೆಂಟ್ ಅಥವಾ ಪೆಂಡಾಲ್‌ಗಳ ವ್ಯವಸ್ಥೆ ಮಾಡಬೇಕು. ಒಟ್ಟಾರೆ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಲೋಪವಾಗದಂತೆ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.
ಹಾಗೆ ದೇವಸ್ಥಾನಕ್ಕೆ ಬರುವ ಎಲ್ಲಾ ಭಕ್ತಾದಿಗಳು ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಧರಿಸಬೇಕು. ಪ್ಲಾಸ್ಟಿಕ್ ವಾಟರ್ ಬಾಟಲ್, ಮತ್ತಿತರ ಪ್ಲಾಸ್ಟಿಕ್ ವಸ್ತುಗಳನ್ನು ಬೆಟ್ಟದ ಮೇಲೆ ಎಲ್ಲೆಂದರಲ್ಲಿ ಹಾಕಬಾರದು, ಗುಟುಕಾ ಮತ್ತು ಧೂಮಪಾನ ವನ್ನು ಬೆಟ್ಟದ ಮೇಲೆ ಬಳಸಬಾರದು ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೊಪ್ಪಳ ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್ ಅವರು ಮಾತನಾಡಿ, ಹನುಮಮಾಲಾ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಲಿದ್ದು, ದಾರಿಯುದ್ದಕ್ಕೂ ಬರುವ ಮಾಲಾಧಾರಿಗಳಿಗೆ ಭಕ್ತಾಧಿಗಳಿಗೆ ಕುಡಿಯುವ ನೀರು ವಿತರಣೆ ಮಾಡಿ ಹಾಗೂ ಅಲ್ಲಲ್ಲಿ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ಹನುಮಮಾಲಾಧಾರಿಗಳಿಗೆ ಸ್ನಾನ ಮಾಡಿ ಬಟ್ಟೆ ಮತ್ತು ಮಾಲೆಗಳನ್ನು ಹಾಕಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಹನುಮಮಾಲಾ ವಿಸರ್ಜನಾ ಕಾರ್ಯಕ್ರಮವನ್ನು ಸಮರ್ಪಕವಾಗಿ ನಿರ್ವಹಿಸಲು ಮೂಲಭೂತ ಸೌಕರ್ಯ ಸಮಿತಿ, ಆಹಾರ ಸಮಿತಿ, ರಸ್ತೆ ನಿರ್ವಹಣಾ ಸಮಿತಿ, ಆರೋಗ್ಯ ಸಮಿತಿ, ಸ್ವಚ್ಛತಾ ಸಮಿತಿ, ಪ್ರಸಾದ ವಿತರಣಾ ಸಮಿತಿ, ಸಾರಿಗೆ ಸಮಿತಿ, ವಿದ್ಯುತ್ ಸಮಿತಿ, ಭದ್ರತಾ ಸಮಿತಿ, ಪ್ರಚಾರ ಮತ್ತು ಮಾಧ್ಯಮ ಸಮಿತಿ, ಶಿಷ್ಟಾಚಾರ ಸಮಿತಿ, ಅಬಕಾರಿ ಸಮಿತಿ, ಅರಣ್ಯ ಸಮಿತಿ ಹಾಗೂ ಸಹಾಯವಾಣಿ ಕೇಂದ್ರ ಸಮಿತಿ ಸೇರಿದಂತೆ ಇನ್ನೂ ಅಗತ್ಯ ಸಮಿತಿಗಳನ್ನು ರಚಿಸಿ, ಆಯಾ ಸಮಿತಿಗಳಿಗೆ ನಿರ್ದಿಷ್ಟವಾಗಿ ಕಾರ್ಯ ಹಂಚಿಕೆ ಮಾಡಲಾಗಿದೆ ಎಂದರು.
ಸಭೆಯಲ್ಲಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ಗಂಗಾವತಿ ನಗರಸಭೆಯ ಅಧ್ಯಕ್ಷರಾದ ಹಿರಾಬಾಯಿ, ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಹನುಮಮಾಲಾ ಕಾರ್ಯಕ್ರಮದ ನೋಡಲ್ ಅಧಿಕಾರಿ ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ದೊಡ್ಡಪ್ಪ ದೇಸಾಯಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ತಹಶೀಲ್ದಾರರು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಹನುಮಮಾಲಾ ಕಾರ್ಯಕ್ರಮ ವಿವಿಧ ಸಮಿತಿಗಳ ಇತರೆ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";