ಮಂಗಳೂರು : ನಗರದ ಅಡ್ಯಾರ್ ಸಹ್ಯಾದ್ರಿ ಗ್ರೌಂಡ್ ನಲ್ಲಿ ಫೆ.17 ರಂದು ಆಯೋಜಿಸಲಾಗಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಭಾನುವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಸಲೀಂ ಮಹಮ್ಮದ್ ಅವರ ಉಸ್ತುವಾರಿಯಲ್ಲಿ ಸಿದ್ಧತಾ ಸಭೆ ನಡೆಯಿತು.
ಜಿಲ್ಲೆಯ ಪ್ರತಿ ಬೂತ್ ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಶಕ್ತಿ ಉಭಯ ಜಿಲ್ಲೆಯಲ್ಲಿ ಭದ್ರವಾಗಿದೆ ಎನ್ನುವ ಸಂದೇಶವನ್ನು ರಾಜ್ಯಕ್ಕೆ ರವಾನಿಸಬೇಕು ಎಂದು ಸಲೀಂ ಅಹಮ್ಮದ್ ಈ ಸಂದರ್ಭದಲ್ಲಿ ಕರೆ ನೀಡಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಕಾಂಗ್ರೆಸ್ ಚುನಾವಣಾ ಪ್ರಚಾರ ಚುರುಕುಗೊಂಡಿದ್ದು, ಕಾರ್ಯಕರ್ತರು ಹುಮ್ಮಸಿನಿಂದ ಕೆಲಸ ಮಾಡುತ್ತಿದ್ದಾರೆ. ಈ ಎರಡು ಉಭಯ ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಐವನ್ ಡಿಸೋಜ, ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಪದ್ಮರಾಜ್.ಆರ್, ಮಮತಾ ಗಟ್ಟಿ, ಕೃಪಾ ಆಳ್ವಾ , ಶಶಿಧರ್ ಹೆಗ್ಡೆ, ಭರತ್ ಮುಂಡೋಡಿ ಮೊದಲಾದವರು ಉಪಸ್ಥಿತರಿದ್ದರು.