ಬೆಂಗಳೂರು: ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.
ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.
ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದರು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನಿಗೆ ಉತ್ತರಿಸಿದರು.
ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.



