ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಇಂದು ಬುಧವಾರ ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ರ‍್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಯುವತಿಯನ್ನು ಹತ್ಯೆ ಮಾಡಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ.
ಗಿರೀಶ್ ಅಂಜಲಿಯನ್ನು ಮನಸಾರೆ ಪ್ರೀತಿಸುತ್ತಿದ್ದ. ಆದರೆ ಆಕೆ ಅವನ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕ್ರೋಧಗೊಂಡ ಆತ ನೇಹಾ ಪಾಟೀಲ್ ಮಾದರಿಯಲ್ಲಿ ನಿನ್ನನ್ನೂ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಕೆಲ ದಿನಗಳ ಹಿಂದೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆ ಇಂದು ಬೆಳಗ್ಗೆ ೫.೩೦ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ.
ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿರುವ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು. ಇದೀಗ ಕೊಲೆಯೇ ನಡೆದಿದೆ.
ಮನೆಗೆ ನುಗ್ಗಿದ ವಿಶ್ವ ಅಂಜಲಿಯನ್ನು ಆಕೆಯ ಅಜ್ಜಿ ಹಾಗೂ ಇಬ್ಬರು ಸಹೋದರಿಯರ ಮುಂದೆಯೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಇರಿದಿದ್ದಾನೆ. ಮೊದಲಿಗೆ ಮನೆಯ ಪಡಸಾಲಿಯಲ್ಲಿ ಅಂಜಲಿಗೆ ಚಾಕು ಹಾಕಿದ ವಿಶ್ವ, ಬಳಿಕ ಕುತ್ತಿಗೆ ಹಿಡಿದು ಗೋಡೆಯತ್ತ ಎಳೆದುಕೊಂಡು ಹೋಗಿ ಹೊಟ್ಟೆ ಭಾಗಕ್ಕೆ ಚಾಕು ಹಾಕಿದ್ದಾನೆ. ಅಲ್ಲಿಂದ ಅಡುಗೆಯ ಮನೆಗೆ ಎಳೆದೊಯ್ದು ಮನ ಬಂದಂತೆ ಚಾಕು ಚುಚ್ಚಿ ಅಂಜಲಿ ಮೃತಪಟ್ಟಿದ್ದಾಳೆ ಎಂದು ದೃಢಪಟ್ಟ ಬಳಿಕವಷ್ಟೇ ಅಲ್ಲಿಂದ ವಾಪಸ್ಸಾಗಿದ್ದಾನೆ.
ಪೊಲೀಸರಿಂದ ತನಿಖೆ: ವಿಷಯ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತ ಯುವತಿಯ ಶರೀರವನ್ನು ರವಾನಿಸಲಾಗುತ್ತಿದೆ.