ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ-2024’

ಕಲೆಗಳಿಂದ ವ್ಯಕ್ತಿತ್ವ ನಿರ್ಮಾಣ: ಸಿದ್ದರಾಮ ಕಲ್ಮಠ

ಬಳ್ಳಾರಿ : ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು, ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸಲು ಪೂರಕವಾಗಿದ್ದು, ವಿಶ್ವವಿದ್ಯಾಲಯದ ಸಾಂಸ್ಕೃತಿಕ ವೇದಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಿಸಲು ಸೂಕ್ತವಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಮಾಜಿ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಸಿದ್ದರಾಮ ಕಲ್ಮಠ ಅವರು ಹೇಳಿದರು.

 

          ಸೋಮವಾರದಂದು, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ-2024’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

          ಪ್ರಪಂಚದಲ್ಲಿ ವಿಶಿಷ್ಟವಾದ ಸಾಂಸ್ಕೃತಿಕ ನೆಲೆಗಟ್ಟುಗಳನ್ನು ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಮನೋಭಾವನೆಯಿಂದಾಗಿ ಸಮಾಜದಲ್ಲಿ ಸ್ಥಿರವಾಗಿ ನಿಲ್ಲುತ್ತಾರೆ ಎಂದು ಅವರು ಅಭಿಪ್ರಾಯ ಪಟ್ಟರು.

 

          ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಜೆ.ತಿಪ್ಪೇರುದ್ರಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಪದ ಕಲೆಗಳು ಕಾಣಸಿಗುವುದು ಹಳ್ಳಿಗಳಲ್ಲಿ ಮಾತ್ರ. ವಿದ್ಯಾರ್ಥಿಗಳು ಅಂತರ್ಜಾಲ ಬಳಕೆಯನ್ನು ಸಾಧ್ಯವಾದಷ್ಟು ಮಿತವಾಗಿ ಬಳಸಬೇಕು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗುತ್ತೇವೆ ಎಂದು ಹೇಳಿದರು.

ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ.ಎಸ್.ಎನ್ ಅವರು ಮಾತನಾಡಿ, ಪೂರ್ವಜರು ತಮ್ಮ ದೈನಂದಿನ ಶ್ರಮದಿಂದ ಉಂಟಾಗುವ ದಣಿವನ್ನು ನಿವಾರಿಸಿಕೊಳ್ಳಲು ಕಲೆಗಳಲ್ಲಿ ತಲ್ಲೀನರಾಗುತ್ತಿದ್ದರು. ಇಂದಿನ ವಿದ್ಯಾರ್ಥಿಗಳಲ್ಲಿ ದೃಢ ಮನಸ್ಸು, ಸಾಧಿಸುವ ಛಲ ಸಂಕುಚಿತವಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವ ಮೂಲಕ, ಬಹುಮುಖ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 

          ಯುವಜನೋತ್ಸವ ಕಾರ್ಯಕ್ರಮದ ಸಾಂಸ್ಕೃತಿಕ ಸಂಚಾಲಕರಾದ ಪ್ರೊ.ಶಿರಗಾನಹಳ್ಳಿ ಶಾಂತನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವೈವಿಧ್ಯತೆಯ ತವರಾಗಿರುವ ನಮ್ಮ ನಾಡು, ಆಧುನಿಕತೆಯಿಂದಾಗಿ ದೇಸೀಯ ಕಲೆಗಳು ಕಣ್ಮರೆಯಾಗುತ್ತಿವೆ. ನಮ್ಮಲ್ಲಿರುವ  ಕಲೆಗಳಿಗೆ ಮರುಜೀವ ಕೊಡಬೇಕಾಗಿದೆ ಎಂದರು. 

          ಅಂತರ್‌ವಿಭಾಗೀಯ ಯುವಜನೋತ್ಸವದಲ್ಲಿ ವಿದ್ಯಾರ್ಥಿಗಳಿಗಾಗಿ 20 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

 

          ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ.ಶಿವಪ್ರಕಾಶ, ಡಾ.ಅಣ್ಣಾಜಿ ಕೃಷ್ಣರೆಡ್ಡಿ ಸೇರಿದಂತೆ ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top