ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ

ಬೆಂಗಳೂರು,29 :ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರುಗಳು ಸಮಿತಿಯ ಸದಸ್ಯರಿದ್ದಾರೆ.


ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯು ವಿವರವಾಗಿ ಪರಿಶೀಲಿಸಿತು. ರಾಜ್ಯ ಸರ್ಕಾರದ ಸರ್ಕಾರಿ ಕಾಲೇಜುಗಳಲ್ಲಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು. ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿತು. ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೈಗೊಳ್ಳಬೇಕಾದ ನೇಮಕಾತಿಗಳನ್ನು ಒಂದು ವಾರದಲ್ಲಿ ಅಧಿಸೂಚಿಸಿ ಮುಂದಿನ ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಲೋಕಸೇವಾ ಆಯೋಗವನ್ನು ಕೋರಲು ಕ್ರಮಕೈಗೊಳ್ಳಬೇಕೆಂದು ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಯಿತು.

Leave a Comment

Your email address will not be published. Required fields are marked *

Translate »
Scroll to Top