ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಅಧ್ಯಕ್ಷರೂ ಆಗಿರುವ, ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಯವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಹೇಳಲಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಆರ್‌ಪಿಪಿ ಅಧ್ಯಕ್ಷ, ಶಾಸಕ ಗಾಲಿ ಜನಾರ್ದನರೆಡ್ಡಿಯವರನ್ನು ದೆಹಲಿಗೆ ಕರೆಯಿಸಿಕೊಂಡಿದ್ದಾರೆಂತಲೂ, ಈ ಹಿನ್ನೆಲೆಯಲ್ಲಿ ಜನಾರ್ದನರೆಡ್ಡಿಯವರು ನವದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಈ ಭಾಗದ ಪ್ರಭಾವಿ ನಾಯಕರಾಗಿರುವ ಶಾಸಕ ಜಿ.ಜನಾರ್ದನರೆಡ್ಡಿಯವರು ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರ ಜೊತೆ ಯಾವ ವಿಷಯಗಳ ಬಗ್ಗೆ ಚರ್ಚಿ ಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ವಿವರಗಳು ಹೊರಬಂದಿಲ್ಲ. ಆದರೆ ಈ ಇಬ್ಬರು ಪ್ರಮುಖ ನಾಯಕರ ಭೇಟಿಯು ಲೋಕಸಭೆ ಚುನಾವಣೆಯ ಈ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ ಹಾಗೂ ಆಸಕ್ತಿ ಮೂಡಿಸಿದೆ.