ಜು.1ರಂದೇ ಅನ್ನಭಾಗ್ಯ ಯೋಜನೆ ಜಾರಿಗೆ ಕಸರತ್ತು

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಹೊರರಾಜ್ಯಗಳಿಂದ ತರಲು ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಜ್ಜಾಗಿದ್ದಾರೆ.

ಯೋಜನೆಗೆ ಅಗತ್ಯವಾದ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಇದನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿರುವ ಸಿದ್ಧರಾಮಯ್ಯ ತಮ್ಮ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜುಲೈ ಒಂದರಂದೇ ಜಾರಿಗೆ ತರಲು ಎಲ್ಲ ಕಸರತ್ತು ನಡೆಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತ ನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಯಾವ ಯಾವ ರಾಜ್ಯಗಳಿಂದ ತರಬಹುದು ಎಂಬ ಕುರಿತು ಮಾಹಿತಿ ಪಡೆದಿದ್ದಲ್ಲದೆ, ಈ ಅಕ್ಕಿಯನ್ನು ಪಡೆಯಲು ಹೊರರಾಜ್ಯದ ಮುಖ್ಯ ಮಂತ್ರಿಗಳನ್ನು ಭೇಟಿಯಾಗಲು ಸಿದ್ಧ ಎಂಬ ಸಂದೇಶ ರವಾನಿಸಿದರು.

ಈ ಮಧ್ಯೆ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ಹಿಂಜರಿದ ಬೆಳವಣಿಗೆಯನ್ನು ಖಂಡಿಸಿದರು.

 

ತೆರೆದ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಅಕ್ಕಿಯನ್ನು ಮೂವತ್ನಾಲ್ಕು ರೂಪಾಯಿ ದರದಲ್ಲಿ ಖರೀದಿಸಲು ನಾವು ಸಿದ್ಧರಿದ್ದರೂ ಕೇಂದ್ರ ಸರ್ಕಾರ ನಮಗೆ ಅಕ್ಕಿ ನೀಡಲು ತಯಾರಿಲ್ಲ ಎಂದಿದೆ. ಆದರೆ ಅದೇ ಕಾಲಕ್ಕೆ ಟೆಂಡರ್ ಮೂಲಕ ಹದಿನೈದು ಲಕ್ಷ ಟನ್ ಅಕ್ಕಿಯನ್ನು ವಿಲೇವಾರಿ ಮಾಡಲು ತಯಾರಿ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಶುರುವಿನಲ್ಲಿ ನಮಗೆ ಅಕ್ಕಿ ಕೊಡು ವುದಾಗಿ ಹೇಳಿದವರು ಇದ್ದಕ್ಕಿದ್ದಂತೆ ಅಕ್ಕಿ ಕೊಡುವುದಿಲ್ಲ ಎಂದಿರುವುದು ರಾಜಕೀಯವೇ ಹೊರತು ಇನ್ನೇನಲ್ಲ. ಬಡವರ ಪರ ಕಾರ್ಯಕ್ರಮಗಳಿಗೆ ಅದು ವಿರುದ್ಧ ವಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ ಎಂದರು.

ಕೇಂದ್ರ ಸರ್ಕಾರದ ಈ ಧೋರಣೆಯ ಹಿನ್ನೆಲೆಯಲ್ಲಿ ನಾವು ತೆಲಂಗಾಣ, ಛತ್ತೀಸ್ ಘಡದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿದ್ದು,ಅವರು ರಾಜ್ಯಕ್ಕೆ ಅಕ್ಕಿ ನೀಡಲು ಒಪ್ಪಿಕೊಂಡಿದ್ದಾರೆ.ಆದರೆ ಯಾವ ರೀತಿ ರಾಜ್ಯಕ್ಕೆ ಸರಬರಾಜು ಮಾಡಬೇಕು ಎಂಬ ಸಂಬಂಧ ಚರ್ಚಿಸಲು ಬರುವಂತೆ ಹೇಳಿದ್ದಾರೆ.

ಅದರ ಪ್ರಕಾರ, ನಮ್ಮ ಅಧಿಕಾರಿಗಳ ತಂಡ ತೆಲಂಗಾಣಕ್ಕೆ ತೆರಳಿದ್ದು,ಆದಷ್ಟು ಬೇಗ ಹೊರರಾಜ್ಯಗಳಿಂದ ಅಗತ್ಯ ದಷ್ಟು ಅಕ್ಕಿ ಪಡೆಯಲು ಕ್ರಮ ಕೈಗೊಳ್ಳುತ್ತೇವೆ. ಸಾಧ್ಯವಾದ ಮಟ್ಟಿಗೆ ಜುಲೈ ಒಂದರಿಂದಲೇ ಈ ಯೋಜನೆಯನ್ನು ಜಾರಿಗೊಳಿಸಲು ತಯಾರಿ ನಡೆಸಿದ್ದೇವೆ ಎಂದರು.

ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಪಡೆಯಲು ಹೊರರಾಜ್ಯದ ಮುಖ್ಯಮಂತ್ರಿಗಳ ಜತೆ ಮಾತನಾಡಲು ನಾನೇ ಸಿದ್ಧ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು.

 

ಕೇಂದ್ರ ಸರ್ಕಾರದ ಅಸಹಕಾರದ ಹಿನ್ನೆಲೆಯಲ್ಲಿ ಹೊರರಾಜ್ಯಗಳಿಂದ ಅಕ್ಕಿ ತರುವುದು ಅನಿವಾರ್ಯ ಸಂದರ್ಭದಲ್ಲಿ ಅಕ್ಕಿಯನ್ನು ಸಾಗುವಳಿ ಮಾಡಲು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ವೆಚ್ಚವಾಗಬಹುದು. ಆದರೆ ಸಾಧ್ಯವಾದ ಮಟ್ಟಿಗೆ ಖರ್ಚನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು.

ತೆಲಂಗಾಣದಿಂದ ಅಕ್ಕಿ ತರುವಾಗ ಗುಲ್ಬರ್ಗ ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಿಗೆ ಕಡಿಮೆ  ವೆಚ್ಚವಾಗುತ್ತದೆ.ಆದರೆ ಛತ್ತೀಸ್ ಘಡದಿಂದ ಅಕ್ಕಿ ತರುವಾ ಹೆಚ್ಚು ವೆಚ್ಚವಾಗುತ್ತದೆ. ಹೀಗಾಗಿ ಎಲ್ಲ ಸಾಧಕ ಭಾದಕಗಳನ್ನು ಪರಿಶೀಲಿಸಿಯೇ ಮುಂದುವರಿಯುವುದಾಗಿ ಅವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದ ಕಾನೂನು ಮತ್ತು ಸಂಸದೀಯ ವ್ಯವ ಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಮಾತನಾಡಿ, ಸಾರಿಗೆ ಇಲಾಖೆ ಹೊಸತಾಗಿ ಹತ್ತು ಡಬಲ್ ಡೆಕ್ಕರ್ ಬಸ್ಸುಗಳು ಮತ್ತು ಎಲೆಕ್ಷ್ಟಿಕ್ ವಾಹನಗಳನ್ನು ಖರೀದಿಸಲು ಇಪ್ಪತ್ತೆಂಟು ಕೋಟಿ ರೂಪಾಯಿ ಕೊಡಲಾಗುವುದು ಎಂದು ನುಡಿದರು. ಕೆ.ಪಿ.ಎಸ್.ಸಿ ಯಲ್ಲಿ ಖಾಲಿ ಇರುವ ಹುದ್ದೆಗನ್ನು ಭರ್ತಿ ಮಾಡಲು ಮತ್ತು ಖಾಲಿಯಾದ ಸದಸ್ಯರ ಹುದ್ದೆಯನ್ನು ಭರ್ತಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಹೇಳಿದರು.

 

ಪ್ರಕೃತಿ ವಿಕೋಪಕ್ಕೆ ಸಂಬಂಧಪಟ್ಟಂತೆ ಸಂಪುಟ ಉಪಸಮಿತಿಯನ್ನು ರಚಿಸಬೇಕಿದ್ದು, ಈ ಸಂಬಂಧದ ಅಧಿಕಾರ ವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ ಎಂದರು.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top