ಬೆಂಗಳೂರು: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿಯಲ್ಲಿಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ಒದಗಿಸಿ, ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು ಎಂದರು.
ಮಾಧ್ಯಮಗಳ ಮಹತ್ವ, ಪತ್ರಕರ್ತರ ಸವಾಲುಗಳ ಬಗ್ಗೆ ಮಾತನಾಡಿದ ಅವರು, ಗ್ರಾಮೀಣ ಪತ್ರಕರ್ತರು ಹೊರತರುವ ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಸುದ್ದಿ, ಲೇಖನ, ಅಂಕಣಗಳು ಉತ್ತಮ ಅಭಿರುಚಿ ಹೊಂದಿರುತ್ತವೆ. ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‍ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‍ನಲ್ಲಿ ಆದ್ಯತೆ ನೀಡಲಾಗುವುದು ಎಂದರು.ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.