ಬೆಂಗಳೂರು: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆಹಳ್ಳಿ ಗ್ರಾಮದ ಒಂದು ನಿರ್ದಿಷ್ಟ ಕೊಳವೆಬಾವಿಯ ನೀರು ಕಲುಷಿತವಾಗಿರುವುದು ಪತ್ತೆಯಾಗಿದ್ದು, ಈ ಕೊಳವೆ ಬಾವಿ ನೀರು ಪೂರೈಕೆ ಸ್ಥಗಿತಗೊಳಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಕಲುಷಿತ ನೀರು ಸೇವಿಸಿ 20 ಮಂದಿ ಅಸ್ವಸ್ಥರಾಗಿದ್ದು, 8 ಮಂದಿ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ಮೂವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಒಬ್ಬರನ್ನು ದಾವಣಗೆರೆ ಸಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸುಧಾರಣೆಯಾಗುತ್ತಿದೆ. ಕಲುಷಿತ ನೀರು ಸರಬರಾಜಾಗುತ್ತಿದ್ದ ಪ್ರದೇದಿಂದ 16 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಗ್ರಾಮದಲ್ಲಿ ತಾತ್ಕಾಲಿಕ ಶಿಫ್ಟ್ ಆಸ್ಪತ್ರೆಯನ್ನು ಸ್ಥಾಪಿಸಲಾಗಿದ್ದು, ನಿರಂತರ ಕಣ್ಗಾವಲು ಮತ್ತು ಅನುಸರಣೆ ಮಾಡಲಾಗುತ್ತಿದೆ.
ಪತ್ರಿಕೆಗಳಲ್ಲಿ ಇಂದು ಬೆಳಗ್ಗೆ ವರದಿ ಪ್ರಕಟವಾಗುತ್ತಿದ್ದಂತೆಯೇ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವವರ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಸೂಚನೆ ನಿಡಿದ್ದಾರೆ.