ಬಳ್ಳಾರಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬಹುದಾದ ಹಾಗೂ ವ್ಯಾಜ್ಯ ಪೂರ್ವ ದಾವಾ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥಗೊಳಿಸಲು ಇದೇ ಮಾ.೧೨ರಂದು ಬೆಳಗ್ಗೆ ೧೧ ಕ್ಕೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್.ಪುಷ್ಪಾಂಜಲಿದೇವಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸತೀಶ್ ಜೆ.ಬಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮೆಗಾ ಅದಾಲತ್ ಕಾರ್ಯಕ್ರಮದಲ್ಲಿ ಬ್ಯಾಂಕ್ ರಿಕವರಿ, ಕಾರ್ಮಿಕ ವಿವಾದಗಳು, ಎಲೆಕ್ಟ್ರೀಸಿಟಿ ಮತ್ತು ಕುಡಿಯುವ ನೀರಿನ, ವೈವಾಹಿಕ, ಕಂದಾಯ ಪ್ರಕರಣಗಳು, ಭೂಮಿ ವಿವಾದ ಸೇರಿದಂತೆ ಇತರೆ ಪ್ರಕರಣಗಳ ಕುರಿತು ಶೀಘ್ರವಾಗಿ ಇತ್ಯರ್ಥಗೊಳಿಸಲಾಗುತ್ತದೆ.ಪ್ರಿ-ಲಿಟಿಗೇಶನ್ ಮತ್ತು ಕೋರ್ಟ್‌ನಲ್ಲಿ ಪೆಂಡಿಂಗ್ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ವಕೀಲರ ಮುಖಾಂತರವಾಗಲೀ ಅಥವಾ ತಾವೇ ನೇರವಾಗಿ ಭಾಗವಹಿಸಬಹುದು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಇಬ್ಬರ ಒಪ್ಪಿಗೆಯಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದ ತೀರ್ಮಾನವಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ತೃಪ್ತಿಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧನಾ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.