12ರಿಂದ 14ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಾರ್ಬೆವ್ಯಾಕ್ಸ್ ಲಸಿಕೆ ಅಭಿಯಾನ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಲಸಿಕೆ ಅಭಿಯಾನ


ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸಿ:ಡಿಎಚ್‍ಒ ಜನಾರ್ಧನ್

ಬಳ್ಳಾರಿ: ಭಾರತ ಸರ್ಕಾರವು ಆರಂಭಿಸಿರುವ ಕೋವಿಡ್ ಲಸಿಕಾ ಅಭಿಯಾನದಲ್ಲಿ 12 ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆಯನ್ನು ನೀಡಲು ಉದ್ದೇಶಿಸಿದ್ದು, ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆಯನ್ನು ಹಾಕಿಸಬೇಕು. ಇದರಿಂದ ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಹೆಚ್.ಎಲ್.ಜನಾರ್ಧನ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡಿಕೆ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕಾ ನೀಡಿಕಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.


2010 ಮಾ.15 ರ ಪೂರ್ವದಲ್ಲಿ ಜನಿಸಿದ ಎಲ್ಲಾ ಮಕ್ಕಳಿಗೆ ಇಂದಿನಿಂದ ಆರಂಭವಾಗುವ ಅಭಿಯಾನದಲ್ಲಿ ಕಾರ್ಬಿವ್ಯಾಕ್ಸ್ ಲಸಿಕೆಯನ್ನು ನೀಡಲಾಗುತ್ತಿದ್ದು, 7ನೇ, 8ನೇ ಹಾಗೂ 9ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆಯನ್ನು ಹಾಕಿಸಿ ಎಂದರು.
60 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಈಗಾಗಲೇ ತಾವು ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳು ಪೂರ್ಣವಾದಲ್ಲಿ ತಪ್ಪದೇ ಮುನ್ನೆಚ್ಚರಿಕಾ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿಗಳಾದ ಡಾ.ಆರ್.ಅನಿಲ್ ಕುಮಾರ್ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 66,150 ಹಾಗೂ ವಿಜಯನಗರ ಜಿಲ್ಲೆಯಲ್ಲಿ 59,726 ಮಕ್ಕಳು ಸೇರಿದಂತೆ ಒಟ್ಟು 1,25,876 ಮಕ್ಕಳಿಗೆ ಲಸಿಕೆಯನ್ನು ನೀಡಲು ಉದ್ದೇಶಿಸಲಾಗಿದೆ ಮತ್ತು 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಬಳ್ಳಾರಿ ಜಿಲ್ಲೆಯಲ್ಲಿ 1,20,589 ಹಾಗೂ ವಿಜಯನಗರ ಜಿಲ್ಲೆಯಲ್ಲಿ 1,09,693 ಹಾಕುವ ಗುರಿಯನ್ನು ಹೊಂದಲಾಗಿದೆ ಎಂದು ವಿವರಿಸಿದರು.


ಕಾರ್ಬಿವ್ಯಾಕ್ಸ್ 2 ಡೋಸ್ ಪಡೆಯಬೇಕಿದೆ. ಮೊದಲನೇ ಡೋಸ್ ಪಡೆದ ನಂತರ 128 ದಿನಗಳ ಅಂತರದಲ್ಲಿ 2ನೇಯ ಡೋಸ್ ಪಡೆಯಬಹುದು ಎಂದು ಹೇಳಿದ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಅನಿಲಕುಮಾರ್ ಅವರು ಈ ನಿಟ್ಟಿನಲ್ಲಿ ಯಾವುದೇ ಭಯವಿಲ್ಲದೇ ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಮಕ್ಕಳ ಆರೋಗ್ಯವನ್ನು ಕೋವಿಡ್ ಸೋಂಕಿನಿಂದ ಮುಕ್ತ ಮಾಡಲು ಸಹಕರಿಸಬೇಕು ಎಂದು ಅವರು ಕೋರಿದರು.
ಕಾರ್ಯಕ್ರಮದಲ್ಲಿ ಜಿಎಮ್‍ಎಚ್‍ಪಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿಯರಾದ ಶ್ರೀಲಹರಿ, ಸೌಮ್ಯ ಸೇರಿದಂತೆ ಇನ್ನಿತರೆ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಕಾರ್ಬಿವ್ಯಾಕ್ಸ್ ಲಸಿಕೆ ನೀಡಲಾಯಿತು ಮತ್ತು 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮುನ್ನೆಚ್ಚರಿಕೆ ಲಸಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಎನ್.ಬಸರೆಡ್ಡಿ, ವಿಮ್ಸ್ ನಿರ್ದೇಶಕರಾದ ಡಾ.ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಗುರುನಾಥ ಬಿ.ಚೌವ್ಹಾಣ, ಎಸ್‍ಎಮ್‍ಓ ಡಾ.ಆರ್.ಎಸ್ ಶ್ರೀಧರ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿಗಳಾದ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ವಿ.ಇಂದ್ರಾಣಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ಮೋಹನಕುಮಾರಿ, ಆರ್.ಎಮ್.ಒ ಡಾ.ವಿಶ್ವನಾಥ್, ಮಕ್ಕಳ ತಜ್ಞರಾದ ಡಾ.ಬಾಲು ವೆಂಕಟೇಶ್, ಡಾ.ಯೋಗೇಶ್ವರ್, ಡಾ.ನಜ್ಮಾ, ಕೆ.ಹೆಚ್.ಪಿ.ಟಿ. ಅಧಿಕಾರಿ ತೇಜಶ್ವಿನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಶುಶ್ರೂಷಣ ಅಧೀಕ್ಷಕರುಗಳಾದ ರಾಜೇಶ್ವರಿ, ವಿಮಲ, ಜಗದೀಶ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.
ಅತ್ಯಂತ ಉತ್ಸಾಹದಿಂದ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಂಡಿದ್ದು ಕಂಡುಬಂದಿತು. ಲಸಿಕೆ ಪಡೆದ ನಂತರ ಸೆಲ್ಪಿ ಕಿಕ್ಕಿಸಿಕೊಂಡು ಸಂತಸಪಟ್ಟಿದ್ದು ವಿಶೇಷವಾಗಿತ್ತು.

Leave a Comment

Your email address will not be published. Required fields are marked *

Translate »
Scroll to Top