ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಜ.7 : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

 

 

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.

ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ

ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ.

ಸತ್ಯಕ್ಕೇ ಅಂತಿಮ ಜಯ

ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top