ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕಾಂಗ್ರೆಸ್ ಮಾನ್ಯತೆ, ಬಾಲಕೃಷ್ಣ ಶಾಸಕತ್ವ ರದ್ದು ಮಾಡಬೇಕು ಎಂದು ಮನವಿ

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಮನವಿ ಸಲ್ಲಿಸಿದ ನಿಖಿಲ್ ನೇತೃತ್ವದ ನಿಯೋಗ

ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ  ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸುತ್ತೇನೆ ಎಂಬುದಾಗಿ ಅವರು ಹೇಳಿಕೆ ನೀಡಿರುತ್ತಾರೆ. ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ ಎಂದು ಜೆಡಿಎಸ್ ತನ್ನ ದೂರಿನಲ್ಲಿ ತಿಳಿಸಿದೆ.

 

ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ದೂರು ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡುತ್ತಾ ಹೇಳಿದರು.

ಅಲ್ಲದೆ, ಎಚ್‌. ಸಿ.ಬಾಲಕೃಷ್ಣ ಅವರ ಹೇಳಿಕೆಯು ನಮ್ಮ ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ. ನಾನು ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇವೆ.  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರು ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಅವರು ಯಾವುದೇ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ. ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಅವರು ಆರೋಪ ಮಾಡಿದರು.

ಕಾಂಗ್ರೆಸ್, ದೇಶ ವಿರೋಧಿ ಮತ್ತು ಕರ್ನಾಟಕ ವಿರೋಧಿ ಪಕ್ಷ. ಸಾರ್ವಜನಿಕರು ಕಾಂಗ್ರೆಸ್ಸಿಗರ  ನಿಜವಾದ ಗುಣವನ್ನು ಅರ್ಥಮಾಡಿಕೊಂಡಿದ್ದಾರೆ, ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಲು ಹೋಗುವುದಿಲ್ಲ ಎಂಬುದು  ಕಾಂಗ್ರೆಸ್ಸಿಗರಿಗೆ ಈಗಾಗಲೇ ಅರಿವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಪಿಎಂ ಮೋದಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವುದು ಖಚಿತ. ಹತಾಶೆಯಿಂದ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ನಿಖಿಲ್ ಅವರು ಹೇಳಿದರು.

 

ಸಂಸದ ಡಿ.ಕೆ.ಸುರೇಶ್ ಅವರು ಹೇಳಿದ್ದನ್ನು ನೀವು ಖಂಡಿತಾ ಕೇಳಿರಬಹುದು. ಇದು ದೇಶದ ಸಾರ್ವಭೌಮತೆಗೆ ವಿರುದ್ಧವಾಗಿದೆ ಮತ್ತು ಅವರನ್ನು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ದೇಶದ ಕಾನೂನು ವ್ಯಾಪ್ತಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಬಿಜೆಪಿಯ ಕೇಂದ್ರ ನಾಯಕತ್ವವು ಪಕ್ಷದ ಕೇಂದ್ರ ಮುಖಂಡರೊಂದಿಗೆ ಮತ್ತು ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೇವೇಗೌಡರನ್ನು ಸಂಪರ್ಕಿಸಿದ ನಂತರ ಜೆಡಿಎಸ್ಎನ್‌ಡಿಎ ಮೈತ್ರಿಯಾಯಿತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಕರ್ನಾಟಕದಲ್ಲಿ ಸ್ಪರ್ಧಿಸಲಿವೆ. ಉತ್ತಮ ಸಾಧನೆಯನ್ನು ತೋರಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯ ಸಾಧಿಸಲಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ ಐದು ಗ್ಯಾರೆಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಬ್ಲ್ಯಾಕ್ ಮೇಲ್ ಮಾಡಿರುವ ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಹೆಚ್.ಸಿ.ಬಾಲಕೃಷ್ಣ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ವತಿಯಿಂದ ದೂರು ನೀಡಲಾಯಿತು.

ಶಾಸಕರಾದ ಬಾಲಕೃಷ್ಣ ಅವರ ಶಾಸಕತ್ವವನ್ನು ರದ್ದು ಮಾಡಬೇಕು ಹಾಗೂ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನೂ  ರದ್ದುಪಡಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳಾದ ಶ್ರೀ ಮನೋಜ್ ಕುಮಾರ್ ಮೀನಾ ಅವರಿಗೆ ಮನವಿ ಸಲ್ಲಿಸಲಾಯಿತು.

 

ಪಕ್ಷದ ಶಾಸಕರಾದ ಸುರೇಶ್ ಬಾಬು, ಕರೆಮ್ಮ ನಾಯಕ್, ಹೆಚ್.ಟಿ.ಮಂಜುನಾಥ, ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಎ.ಪಿ.ರಂಗನಾಥ್ ಸೇರಿ ಅನೇಕ ನಾಯಕರು ನಿಯೋಗದಲ್ಲಿ ಇದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top