ಬೆಂಗಳೂರು : ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಕಾವೇರಿ ಮತ್ತು ಲಕ್ಷ್ಮಣತೀರ್ಥ ನದಿಗಳಲ್ಲಿ ಪ್ರವಾಹ ಸ್ಥಿತಿ ಇನ್ನೂ ಮುಂದುವರೆದಿದೆ.
ಜಿಲ್ಲೆಯಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ಪ್ರಸ್ತುತ 10 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತ ಕುಟುಂಬಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್ ಭೇಟಿಯಾಗಿ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಸುಮಾರು 180 ಸಂತ್ರಸ್ತರು ಈ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಂದು ಕೂಡ ಕೊಡಗು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳುತ್ತಿರುವ ಬಿಜೆಪಿ ಮುಖಂಡರ ನಿಯೋಗದಲ್ಲಿರುವ ಮಾಜಿ ಉಪ ಮುಖ್ಯಮಂತ್ರಿ ಡಾಕ್ಟರ್ ಅಶ್ವತ್ ನಾರಾಯಣ ಇಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆ ಹಾನಿ ಸಂತ್ರಸ್ತರಿಗೆ ಸರ್ಕಾರದಿಂದ ಸೂಕ್ತ ಮತ್ತು ವಿಳಂಭ ರಹಿತವಾಗಿ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ತನ್ನ ಕಾರ್ಯವನ್ನು ನಿರ್ವಹಿಸಲಿದೆ ಎಂದು ಹೇಳಿದರು.
ಕೊಡಗಿನ ಹಾರಂಗಿ ಜಲಾಶಯದಲ್ಲಿ ಇಂದು 8446 ಕ್ಯೂಸೆಕ್ ನೀರಿನ ಒಳ ಹರಿವಿದ್ದು ಜಲಾಶಯದಿಂದ 8500 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
2,859 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಇಂದು 2854 ಅಡಿ ನೀರು ಸಂಗ್ರಹವಾಗಿದೆ. ಮಂಡ್ಯ ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ಜಲಾಶಯದಿಂದ ಸುಮಾರು 1.70 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿದೆ.
ಈ ಹಿನ್ನಲೆಯಲ್ಲಿ ಪ್ರವಾಹದಂತೆ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಕೆ.ಆರ್.ಎಸ್ ಜಲಾಶಯ, ಬೃಂದಾವನ ಉದ್ಯಾನವನ, ಪಶ್ಚಿಮವಾಹಿನಿ, ಬಲಮುರಿ ಎಡಮುರಿ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಭ ದೇವಸ್ಥಾನದ ಪಕ್ಕದಲ್ಲಿರುವ ಸ್ನಾನ ಘಟ್ಟ, ರಂಗನತಿಟ್ಟು ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ನದಿಪಾತ್ರದ ಗ್ರಾಮಗಳ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.
ಹೊನ್ನಾಳಿ ಪಟ್ಟಣದ ಬಾಲರಾಜ್ಘಾಟ್, ಬಂಬೂ ಬಜಾರ್ ಪ್ರದೇಶಗಳಿಗೆ ಶಾಸಕ ಡಿ.ಜಿ.ಶಾಂತನಗೌಡ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೀಕ್ಷಣೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ತುಂಗಾ ನದಿಯಿಂದ 80 ಸಾವಿರ ಮತ್ತು ಭದ್ರಾದಿಂದ 62 ಸಾವಿರದ 415 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಇದರಿಂದ ನೆರೆಗೆ ತುತ್ತಾಗಿರುವ 20 ಕುಟುಂಬಗಳ 93 ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.