ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ.

ಸರ್ಕಾರ ನಿಮ್ಮೊಂದಿಗಿದೆ ಎಂದ ಮುಖ್ಯಮಂತ್ರಿ

ಬೆಂಗಳೂರು : ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು. ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಾದರು. ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್‌ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು.

ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಯವರು ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಅಂಗಾಂಗ ದಾನ ಕೋರಿ, ನೋಂದಾಯಿಸಿಕೊಂಡವರ ಸಂಖ್ಯೆ 8000 ಕ್ಕೂ ಹೆಚ್ಚಿದ್ದು, ಕಳೆದ ಒಂದು ವರ್ಷದಲ್ಲಿ ಕೇವಲ 178 ಅಂಗಾಂಗ ದಾನ ನಡೆದಿದೆ. ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಇದು ಇನ್ನಷ್ಟು ಹೆಚ್ಚಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

 

ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಲಾಗುವುದು. ಒಬ್ಬ ವ್ಯಕ್ತಿ ಅಂಗಾಂಗ ದಾನದ ಮೂಲಕ ಎಂಟು ಜನರಿಗೆ ಜೀವದಾನ ಮಾಡಬಹುದು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌ ಹಾಗೂ ಆಯುಕ್ತ ಡಿ.ರಂದೀಪ್‌ ಮತ್ತಿತರರು ಉಪಸ್ಥಿತರಿದ್ದರು

Facebook
Twitter
LinkedIn
Telegram
WhatsApp
Email
Tumblr

Leave a Comment

Your email address will not be published. Required fields are marked *

Translate »
Scroll to Top