ನವದೆಹಲಿ : ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಪತ್ರ ಬರೆದಿದ್ದು, ಮತಗಳ್ಳತನ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಅಲ್ಲದೇ ಪ್ರಮಾಣಪತ್ರದ ಕಾಪಿಯನ್ನು ಸಹ ರಾಹಲ್ ಗಾಂಧಿಗೆ ಕಳುಹಿಸಿದ್ದಾರೆ.
ಮತದಾರರ ಪಟ್ಟಿ ಪಾರದರ್ಶಕವಾಗಿ ನಡೆಯುತ್ತೆಂದು ತಮಗೆ ಅರಿವಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕರಿಗೆ ಮತದಾರರ ಪಟ್ಟಿ ನೀಡಲಾಗಿದೆ. 2024ರ ನವೆಂಬರ್ ಮತದಾರರ ಕರಡು ಪ್ರತಿಯನ್ನು ನೀಡಲಾಗಿದೆ. 2025ರ ಜನವರಿಯಲ್ಲಿ ಅಂತಿಮ ಮತದಾರರ ಪಟ್ಟಿ ನೀಡಲಾಗಿದೆ. ಅಂತಿಮ ಮತದಾರರ ಪಟ್ಟಿ ಕೊಟ್ಟ ಮೇಲೆ ಕಾಂಗ್ರೆಸ್ ನಾಯಕರಿಂದ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ. ಚುನಾವಣಾಧಿಕಾರಿ ಮುಂದೆ 2ನೇ ಹಂತದ ಆಕ್ಷೇಪಣೆ ಸಲ್ಲಿಸಿಲ್ಲ. ಇಷ್ಟೆಲ್ಲಾ ಗೊತ್ತಿದ್ದರೂ ಇಂದು ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆ ಎತ್ತಿದ್ದೀರಿ ಎಂದು ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಚುನಾವಣೆ ಬಗ್ಗೆ ಆಕ್ಷೇಪಣೆಗಳಿದ್ದರೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ರಿಜಿಸ್ಟ್ರೇಷನ್ ಆಫ್ ಎಲೆಕ್ಟೋರ್ಸ್ ರೂಲ್ಸ್ 1960ರ 20(3)(b) ಪ್ರಕಾರ ಒಂದು ಪ್ರಮಾಣಪತ್ರಕ್ಕೆ ಸಹಿ ಮಾಡಿ ಕಳುಹಿಸಿದರೆ ಮುಂದಿನ ಕ್ರಮ ಕೈಗೊಳ್ಳಲು ಸಹಾಯವಾಗಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರು ಪತ್ರದ ಮೂಲಕ ರಾಹುಲ್ ಗಾಂಧಿ ಆರೋಪಕ್ಕೆ ಟಾಂಗ್ ಕೊಟ್ಟಿದ್ದಾರೆ.
ರಾಹುಲ್ ಗಾಂಧಿ ಆರೋಪವೇನು?,
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ 7 ಕ್ಷೇತ್ರಗಳ ಪೈಕಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
ಗುರುಕಿರತ್ ಸಿಂಗ್ ಡ್ಯಾಂಗ್ ಎನ್ನುವ ವ್ಯಕ್ತಿಯ ಹೆಸರು ಮಹದೇವಪುರದ 4 ಬೂತ್ಗಳಲ್ಲಿ ಪತ್ತೆಯಾಗಿದೆ. ಇಂತಹ ಸಾವಿರಾರು ಉದಾಹರಣೆ ಒಂದು ವಿಧಾನಸಭೆ ಕ್ಷೇತ್ರದಲ್ಲಿದೆ. ಆದಿತ್ಯ ಶ್ರೀ ವಾಸ್ತವ್ಯ ಕರ್ನಾಟಕ ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಮತದಾನದ ಹಕ್ಕು ಹೊಂದಿದ್ದಾನೆ. ಲಕ್ಷಾಂತರ ಜನರು ಹೀಗೆ ಬೇರೆ ಬೇರೆ ನಕಲಿ ವೋಟರ್ ಐಡಿ ಹೊಂದಿದ್ದಾರೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಮತದಾನದ ದಾಖಲೆಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.