ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ಗೆ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಪೊಲೀಸ್ ಅಧಿಕಾರಿಗಳು ಸೂಕ್ತ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ಗೆ ದ್ವೈವಾರ್ಷಿಕ ಚುನಾವಣಾ ಸಂಬಂಧ ನೀತಿ ಸಂಹಿತೆ ಕುರಿತು ಜೂಮ್ ಆ್ಯಪ್ ಮೂಲಕ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ, ಭದ್ರತಾ ಕೊಠಡಿಗೆ, ತಾಲ್ಲೂಕುಗಳಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ವೇಳೆ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ, ಕನಕಪುರ ತಾಲ್ಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೂಕ್ಷ್ಮ ಮತಗಟ್ಟೆಗಳಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಭದ್ರತೆ ವಹಿಸಲು ತಿಳಿಸಿದರು. ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಶಿಕೃಷ್ಣ, ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.