ಶಿವಮೊಗ್ಗ, ಫೆ.19: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‍ನಲ್ಲಿ 96ಸಾವಿರಕ್ಕೂ ಅಧಿಕ ರೈತರು ಖಾತೆಯನ್ನು ಹೊಂದಿದ್ದರೂ, ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆ ಕೇವಲ 19ಸಾವಿರ ಮಾತ್ರ. ಬೆಳೆ ಹಾನಿ ಸಂಭವಿಸಿದ ಸಂದರ್ಭದಲ್ಲಿ ವಿಮಾ ಹಣವನ್ನು ನೀಡುವ ಈ ಮಹತ್ವದ ಯೋಜನೆ ಬಗ್ಗೆ ರೈತರಿಗೆ ಮಾಹಿತಿಯನ್ನು ಒದಗಿಸಿ, ಯೋಜನೆಯ ಲಾಭವನ್ನು ಹೆಚ್ಚಿನ ರೈತರು ಪಡೆಯುವಂತೆ ಮನವೊಲಿಸಬೇಕು ಎಂದು ಸಚಿವರು ತಿಳಿಸಿದರು.
ರೈತರಿಗೆ ನೀಡಲಾಗುತ್ತಿರುವ ಬೆಂಬಲ ಬೆಲೆಯ ಸಂಪೂರ್ಣ ಲಾಭ ರೈತರಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ಮಧ್ಯವರ್ತಿ ವ್ಯಾಪಾರಿಗಳಿಗೆ ಇದರ ಪ್ರಯೋಜನ ಪಡೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕು. ರೈತರು ಭತ್ತವನ್ನು ಪಕ್ಕದ ಜಿಲ್ಲೆಯ ಅಕ್ಕಿ ಗಿರಣಿಗಳಿಗೆ ಸಾಗಾಣಿಕೆ ಮಾಡಿದ್ದಲ್ಲಿ, ಅದಕ್ಕೆ ತಗಲುವ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುತ್ತಿದ್ದು, ನೇರವಾಗಿ ರೈತರ ಖಾತೆಗೆ ಹಣ ಜಮಾ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಕಳೆದ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿರುವ ಪ್ರಕರಣಗಳಲ್ಲಿ ಹೆಚ್ಚಿನ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ತಾಲೂಕುವಾರು ಬೆಳೆ ಹಾನಿ ವಿವರಗಳನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದರು. ಜಲಜೀವನ ಮಿಷನ್: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಜಲಜೀವನ ಮಿಷನ್ ಯೋಜನೆ ಅನುಷ್ಟಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 14ನೇ ಸ್ಥಾನದಲ್ಲಿದೆ. ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಕುರಿತು ದೂರು ಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಅಂತಹ ಪ್ರಕರಣಗಳಲ್ಲಿ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 3ಲಕ್ಷ ಮನೆಗಳಿಗೆ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಲಾಗಿದೆ. ಪ್ರಥಮ ಹಂತದಲ್ಲಿ 86,898 ಮನೆಗಳಿಗೆ ನೀರು ಸಂಪರ್ಕ ಕಲ್ಪಿಸಲಾಗುತ್ತಿದ್ದು, ಇದುವರೆಗೆ 75ಸಾವಿರ ಸಂಪರ್ಕಗಳನ್ನು ಪೂರ್ಣಗೊಳಿಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಇನ್ನುಳಿದ ಕಾಮಗಾರಿಗಳನ್ನು ಮಾರ್ಚ್ ಅಂತ್ಯದ ಒಳಗಾಗಿ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು. ಶಾಸಕರಾದ ಕುಮಾರ ಬಂಗಾರಪ್ಪ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪಿ.ರುದ್ರೇಗೌಡ, ಬೋಜೇಗೌಡ, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.