ಡಿ.21 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ; ಬಳ್ಳಾರಿ ಜಿಲ್ಲೆಯಲ್ಲಿ 1,89,745 ಮಕ್ಕಳಿಗೆ ಲಸಿಕೆ ಗುರಿ

Kannada Nadu
ಡಿ.21 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ; ಬಳ್ಳಾರಿ  ಜಿಲ್ಲೆಯಲ್ಲಿ 1,89,745 ಮಕ್ಕಳಿಗೆ ಲಸಿಕೆ ಗುರಿ

ಬಳ್ಳಾರಿ : ಜಿಲ್ಲೆಯಲ್ಲಿ ಇದೇ ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅರ್ಹ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕ್ರಮ ವಹಿಸಬೇಕು. ಈ ಕುರಿತು ವ್ಯಾಪಕವಾಗಿ ಪ್ರಚಾರ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಲಸಿಕಾಕರಣಕ್ಕೆ ಐದು ತಿಂಗಳಿಂದ ಒಂದು ವರ್ಷದ ಒಳಗಿನ 1,89,745 ಮಕ್ಕಳನ್ನು ಗುರುತಿಸಲಾಗಿದೆ. 920 ಲಸಿಕಾ ಬೂತ್, 49 ಸಂಚಾರಿ ಬೂತ್‌ಗಳನ್ನು ನಿರ್ಮಿಸಲಾಗಿದೆ. ಡಿ.21 ರಂದು ಬೂತ್‌ಗಳಲ್ಲಿ, ನಂತರದ ಮೂರು ದಿನಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ತೆರಳಿ ಲಸಿಕೆ ಹಾಕಿರುವ ಬಗ್ಗೆ ಮಾಹಿತಿ ಪಡೆದು, ಲಸಿಕೆಯಿಂದ ಹೊರಗುಳಿದ ಮಗುವಿಗೆ ಲಸಿಕೆ ಹಾಕಲಾಗುತ್ತದೆ ಎಂದು ಹೇಳಿದರು.
ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದ್ದು, ಈ ಬಾರಿಯೂ ಶೇ.100 ಪ್ರಗತಿ ಸಾಧಿಸಬೇಕು. ಈ ಕಾರ್ಯಕ್ರಮ ವ್ಯಾಪಕ ಪ್ರಚಾರಕ್ಕಾಗಿ ಶಾಲಾ ಮಕ್ಕಳಿಂದ ಜಾಥಾ ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕುರಿತು ಜಾಗೃತಿ ಮೂಡಿಸಬೇಕು. ನಗರಸಭೆ ಮತ್ತು ಇನ್ನಿತರೆ ಸ್ಥಳೀಯ ಸಂಸ್ಥೆಗಳ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಆಡಿಯೋ ಮೂಲಕ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚುರಪಡಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ವಿಡೀಯೋ ಚಿತ್ರೀಕರಿಸಿ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಗತ್ಯವಿದ್ದಷ್ಟು ವಾಹನಗಳನ್ನು ಒದಗಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪಲ್ಸ್ ಪೋಲಿಯೋ ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‌ಗಳನ್ನು ತಯಾರಿಸಲು ನಿರಂತರ ವಿದ್ಯುತ್ ಅವಶ್ಯಕತೆಯಿದ್ದು, ಡಿ.18 ರಿಂದ 24 ವರೆಗೆ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ವಿದ್ಯುಚ್ಛಕ್ತಿಯನ್ನು ನಿರಂತರವಾಗಿ ಸರಬರಾಜು ಮಾಡಲು ಕ್ರಮವಹಿಸಬೇಕು ಎಂದು ಕೆಪಿಟಿಸಿಎಲ್ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ ಲಸಿಕೆ ಹಾಕಲು ಪೋಷಕರಿಗೆ ಪ್ರೇರೇಪಿಸಬೇಕು. ಈ ಕುರಿತು ಡಿಡಿಪಿಐ ಅಧಿಕಾರಿ ಮುತುವರ್ಜಿ ವಹಿಸಬೇಕು ಎಂದರು.ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಲಸಿಕೆ ನೀಡುವ ಸ್ಥಳ ಹಾಗೂ ದಿನಾಂಕವನ್ನು ಕರಪತ್ರದಲ್ಲಿ ಮುದ್ರಿಸಿ ಪ್ರಚಾರ ಕೈಗೊಳ್ಳಬೇಕು. ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಭಾಗವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು ಹಾಗೂ ಇತರೆ ವಲಸೆ ಪ್ರದೇಶಗಳಲ್ಲಿ ಹುಟ್ಟಿನಿಂದ 05 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸುವಂತೆ ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜಿಲ್ಲೆಯಲ್ಲಿನ ಯಾವುದೇ ಒಬ್ಬ ಮಗು ಸಹ ಲಸಿಕೆಯಿಂದ ಹೊರಗುಳಿಯಬಾರದು. ಸಂಡೂರು ಭಾಗದ ತೋರಣಗಲ್ಲು, ವಡ್ಡು, ತಾಳೂರು, ರಾಮಘಡ, ಕಮತೂರು, ದೇವಗಿರಿ ಸೇರಿದಂತೆ ಗಣಿಬಾಧಿತ ಪ್ರದೇಶಗಳ ಗ್ರಾಮಗಳಲ್ಲಿನ ಮಕ್ಕಳನ್ನು ಗಮನಹರಿಸಿ ಅವರಿಗೂ ಕೂಡ ಪಲ್ಸ್ ಪೆÇೀಲಿಯೋ ಲಸಿಕೆ ನೀಡಬೇಕು. ಅದರಲ್ಲೂ ಜೆಎಸ್ ಡಬ್ಲ್ಯೂ, ಎನ್‍ಎಂಡಿಸಿ ಕೈಗಾರಿಕಾ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮತ್ತು ಹೊರ ರಾಜ್ಯದಿಂದ ಬಂದಂತಹ  ಕಾರ್ಮಿಕರ ಮಕ್ಕಳನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ತಾಕೀತು ಮಾಡಿದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ವಿಶ್ವ ಆರೋಗ್ಯ ಸಂಸ್ಥೆಯ ಎಸ್.ಎಮ್.ಒ ಡಾ.ಶ್ರೀಧರ್, ಜಿಲ್ಲಾ ಯೋಜನಾಭಿವೃದ್ಧಿ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿರ್ಮೂಲನಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಲಸಿಕಾ ಕ್ಷೇತ್ರದ ಮೇಲ್ವಿಚಾರಕರಾದ ಕಾಪ್ಸೆ.ಕೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";