ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಕಾಣುತ್ತಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್. ಕೆ. ಅತೀಕ್ ಅವರಿಗೆ ರಾಜ್ಯಪಾಲರು ರವಾನಿಸಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಬ್ಬರು ಕಾರ್ಯಕರ್ತರಿಂದ ದೂರುಗಳನ್ನು ಸ್ವೀಕರಿಸಿದ್ದಾರೆ, ಒಂದನ್ನು ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಹಾಂ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ದೂರನ್ನು ಸಲ್ಲಿಸಿದ್ದಾರೆ. ದೂರುದಾರರಾದ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಅವರನ್ನು ರಾಜಭವನಕ್ಕೆ ಬರುವಂತೆ ಆಹ್ವಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.
ಮುಡಾ ಪ್ರಕರಣ:
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
ಆಗಸ್ಟ್ 1ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿ ಪರಿಷತ್ ಸಭೆ, ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ನೀಡಿರುವ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ನೋಟಿಸ್ ಹಿಂದಕ್ಕೆ ಪಡೆಯಬೇಕು ಮತ್ತು ಅಬ್ರಹಾಂ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕು’ ಎಂದು ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನ ಕೈಗೊಂಡಿತ್ತು.