ಬೆಳಗಾವಿ ಮಾರ್ಚ್ 09, : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಳಗಾವಿ ಜಿಲ್ಲೆಯ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು. ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (ಎಬಿ-ಎಆರ್‌ಕೆ) ಯೋಜನೆಯನ್ನು ಜಾರಿಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು. ಎಲ್ಲಾ ವರ್ಗದ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಯೋಜನೆ ಬಗ್ಗೆ ಜಾಗೃತಿ ಮೂಡಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಪ್ರತಿಯೊಬ್ಬರ ಕರ್ತವ್ಯದ ಜೊತೆಗೆ, ಈ ಯೋಜನೆಯ ಫಲನುಭವಿಗಳು ಸಹ ಇದರಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಇನ್ನಿತರರಿಗೆ ಮಾಹಿತಿಯನ್ನು ಹಂಚಿಕೊಳ್ಳಬೇಕು. ಯಾವುದೇ ಫಲಾನುಭವಿಯು ಯೋಜನೆಯಿಂದ ವಂಚಿತರಾಗಬಾರದು ಎಂದು ಹೇಳಿದರು.
ಎ ಬಿ ಆರ್ ಕೆ ನೋಡಲ್ ಅಧಿಕಾರಿ ಚಾಂದನಿ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎಬಿ ಆರ್ ಕೆ ಯೋಜನೆ ಜಾರಿ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ನಂತರ ಅಲ್ಲಿ ನೆರೆದಿದ್ದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಮಾಹಿತಿ ಭಿತ್ತಿಪತ್ರವನ್ನು ಗೌರವಾನ್ವಿತ ರಾಜ್ಯಪಾಲರು ವಿತರಿಸಿದರು. ಇದೇ ಸಂದರ್ಭದಲ್ಲಿ ಎಲ್ಲ ಫಲಾನುಭವಿಗಳ ಜತೆಗೆ ಗೌರವಾನ್ವಿತ ರಾಜ್ಯಪಾಲರು ಚಹಾ ಸೇವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಂ ನಸಲಾಪುರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ್ ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು.