ಬೆಂಗಳೂರು : ರಾಯಚೂರು ನಗರದಲ್ಲಿನ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಯೋಜಿಸಲಾಗಿರುವ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವ ಭರವಸೆಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ನೀಡಿದರು.
ಇಂದು ವಿಕಾಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾಗಿದ್ದ ದೇವರಾಜ ಅರಸು ಟ್ರಕ್ ಟರ್ಮಿನಲ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಈಗಾಗಲೇ ರಾಯಚೂರು ಜಿಲ್ಲೆಯ ಯರಮರಸ್ ಗ್ರಾಮದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ 10 ಏಕರೆಗಳಷ್ಟು ಜಾಗವನ್ನು ಮೀಸಲಿರಿಸಲಾಗಿದೆ. ಇದರ ಆರ್‌ಟಿಸಿ ಬದಲಾವಣೆ ಹಾಗೂ ಬೌಂಡರಿಗಳನ್ನು ಸಂರಕ್ಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶಿಸಲಾಗಿದೆ. ಜಾಗದಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಸುಮಾರು 25 ಕೋಟಿ ರೂಪಾಯಿಗಳ ಅಗತ್ಯವಿದೆ. ಪ್ರಾಥಮಿಕ ಹಂತದ ಕಾರ್ಯಗಳನ್ನು ಕೈಗೊಳ್ಳಲು ಸುಮಾರು 3 ಕೋಟಿ ರೂಪಾಯಿಗಳ ಅಗತ್ಯವಿದೆ. ಪ್ರಾಥಮಿಕ ಹಂತದ ಕಾಮಗಾರಿಗಳನ್ನು ಮುಗಿಸಿದಲ್ಲಿ ಜಮೀನಿನ ರಕ್ಷಣೆ ಹಾಗೂ ಸದುಪಯೋಗ ಸಾಧ್ಯವಿದೆ. ಇದಕ್ಕೆ ಅಗತ್ಯವಿರುವ ಅನುದಾನವನ್ನ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರ ಸಹಯೋಗದಲ್ಲಿ ಕೆಕೆಆರ್‌ಡಿಬಿಯಿಂದ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ದೇವರಾಜ ಅರಸು ಟ್ರಕ್ ಟರ್ಮಿನಲ್ ನ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.