ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದ್ದೇ ಕುಕ್ಕರ್, ಇಸ್ತ್ರಿ ಪೆಟ್ಟಿಗೆ, ಮಿಕ್ಸಿ, ತವಾ ಹಂಚಿ

ಕಾಂಗ್ರೆಸ್ ಶಾಸಕರ ಸದಸ್ಯತ್ವ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಒತ್ತಾಯ

ಗಿಫ್ಟ್ ಕೂಪನ್, ಗ್ಯಾರಂಟಿ ಕಾರ್ಡ್ ಹಂಚಿಕೆ ಬಗ್ಗೆ ಕೇಂದ್ರ ಸರಕಾರ ತನಿಖೆ ಮಾಡಿಸಬೇಕು

: ಲೋಕಸಭೆಗೆ ಸ್ಪರ್ಧಿಸಲ್ಲ ಎಂದ ಹೆಚ್ಡಿಕೆ :

ಚನ್ನಪಟ್ಟಣ/ರಾಮನಗರ : ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಚನ್ನಪಟ್ಟಣದಲ್ಲಿ ಇಂದು ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಈ ಸರಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್ ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ ಮಾಡಿದ್ದಾರೆ. ಈ ಕೂಪನ್ ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ ಆ ಪಕ್ಷದ 135 ಶಾಸಕರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು.

ಕಳೆದ ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾಗಳ ಮೇಲೆಯೇ. ಈ ಚುನಾವಣೆ ನಡೆಸಿದ್ದೇ ಕುಕ್ಕರ್, ಇಸ್ತ್ರಿಪೆಟ್ಟಿಗೆ, ತವಾ ಹಂಚಿಕೊಂಡು. ಅವುಗಳಿಂದಲೇ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗೆದ್ದಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ಇದಕ್ಕೆಲ್ಲ ರಾಜ್ಯದ ಜನತೆಗೆ ಮರುಳಾಗಬೇಡಿ ಅಂದಿದ್ದೆ. ನಮ್ಮ ಚನ್ನಪಟ್ಟಣದಲ್ಲಿ ನಮ್ಮ ಜನ ಇಂಥ ಆಮಿಷಗಳಿಗೆ ಮರುಳು ಆಗಲಿಲ್ಲ. ಆದರೆ, ರಾಮನಗರದಲ್ಲಿ ಅದೆಲ್ಲಾ ನಡೆಯಿತು. ಅಲ್ಲಿ ಗಿಫ್ಟ್ ಕೂಪನ್ ಗಳನ್ನು ಹಂಚಿಕೆ ಮಾಡಲಾಯಿತು. ಚುನಾವಣಾ ಆಯೋಗ ಸರಿಯಾಗಿ ತನಿಖೆ ಮಾಡಿದರೆ, ಸತ್ಯ ಹೊರಬರುತ್ತದೆ. ಈ ಸರಕಾರವನ್ನು ವಜಾ ಮಾಡಬೇಕು ಎಂದರು ಮಾಜಿ ಮುಖ್ಯಮಂತ್ರಿಗಳು.

 

ಈವರೆಗೂ ರಾಜ್ಯದಲ್ಲಿ ಇಂಥ ಅಕ್ರಮ ಸರಕಾರ ಬಂದಿಲ್ಲ. ಪ್ರಜಾಪ್ರಭುತ್ವದ ದಾರಿಯಲ್ಲಿ ಈ ಸರಕಾರ ಅಧಿಕಾರಕ್ಕೆ ಬಂದಿಲ್ಲ. ಚುನಾವಣಾ ಆಯೋಗ ಸರಿಯಾದ ರೀತಿ ತೀರ್ಮಾನ ಮಾಡಿದರೆ ಈ ಸರಕಾರವನ್ನು ವಜಾ ಮಾಡಬೇಕು ಎಂದ ಅವರು, ಕೇಂದ್ರ ಸರಕಾರವೂ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದರು.

ಯಾವುದೇ ಕಾರಣಕ್ಕೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ನಾನು ವಿಧಾನಸಭೆಯಲ್ಲಿ ಚನ್ನಪಟ್ಟಣದಿಂದ ಗೆದ್ದಿದ್ದೇನೆ.

ಚನ್ನಪಟ್ಟಣದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ನಾನು ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಅಂತಹ ಆಲೋಚನೆಯೂ ಇಲ್ಲ  ಎಂದು ಅವರು ತಿಳಿಸಿದರು.

 

ಬಿಜೆಪಿ ಜತೆ ಮೈತ್ರಿ ಕುರಿತ ಚರ್ಚೆಗೆ ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಆ ಪಕ್ಷದ ಹೈಕಮಾಂಡ್ ನ ಕೆಲ ಉನ್ನತ  ನಾಯಕರನ್ನು ಭೇಟಿ ಮಾಡುತ್ತೇನೆ. ಭೇಟಿ ಬಳಿಕ ಏನು ಚರ್ಚೆ ಆಗುತ್ತದೋ ನೋಡೊಣ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Facebook
Twitter
LinkedIn
WhatsApp
Telegram
Tumblr
Email

Leave a Comment

Your email address will not be published. Required fields are marked *

Translate »
Scroll to Top