ಬೆಂಗಳೂರು : ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿಂದು ಅತಿವೃಷ್ಠಿ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಜೂನ್ ೧ ರಿಂದ ಆಗಸ್ಟ್ ೧೫ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡ ೨೨ ರಷ್ಟು ಹೆಚ್ಚು ಮಳೆಯಾಗಿದೆ.ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ.ಆದರೆ ೧೩ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿರುವ ಬಗ್ಗೆ ವರದಿಗಳು ತಿಳಿಸಿವೆ ಎಂದರು.
ಆದರೆ ೯ ತಾಲೂಕುಗಳಲ್ಲಿ ಕಡಿಮೆ ಮಳೆಯಾಗಿದೆ.ರಾಜ್ಯದಲ್ಲಿ ೮೨ ಲಕ್ಷ ಹೆಕ್ಟೇರ್ ಬಿತ್ತನೆಯ ಗುರಿಯಿದ್ದು, ಈಗಾಗಲೇ ೭೦ ಲಕ್ಷ ಹೆಕ್ಟೆರ್ ಬಿತ್ತನೆಯಾಗಿದೆ. ಗುರಿ ಮೀರಿ ಸಾಧನೆಯ ನಿರೀಕ್ಷೆಯಿದೆ.ಪೂರ್ವ ಮುಂಗಾರಿನಲ್ಲಿ ಬಿತ್ತನೆಯಾದ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಹೆಚ್ಚು ಮಳೆಯಾಗಿರುವ ಪ್ರದೇಶಗಳಲ್ಲಿ ವಿವಿಧ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಬೇಕು. ಅಂತರ್ಜಲ ವೃದ್ಧಿಗೆ ಒತ್ತು ನೀಡಬೇಕು.ಒಟ್ಟಾರೆ ಜಲಾಶಯಗಳು ಶೇಕಡ ೮೯ ರಷ್ಟು ಭರ್ತಿಯಾಗಿವೆ ಎಂದರು.
ಮಳೆ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು.ಅತಿವೃಷ್ಟಿಯಿಂದ ೬೭ ಮಂದಿ ಮೃತಪಟ್ಟಿದ್ದು, ೬೬ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ.
ಪ್ರವಾಹ ನಿಯಂತ್ರಣಕ್ಕೆ ಪಂಚಾಯತ್ ಮಟ್ಟದ ಕಾರ್ಯಪಡೆಗಳಿಗೆ ತಲಾ ೨೦ ಲಕ್ಷ ಅನುದಾನ ಒದಗಿಸಲಾಗಿದೆ.ಮನೆ ಹಾನಿಗೊಳಗಾದವರಿಗೆ ೧೦ ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ.ಎಲ್ಲಾ ಅಧಿಕಾರಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹೆದ್ದಾರಿಗಳು ದುರಸ್ತಿಗೆ ೨೧೦ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದರು.
ಪ್ರವಾಹ ಸಂದರ್ಭದಲ್ಲಿ ಎದುರಾಗಬಹುದಾದ ಸಾಂಕ್ರಾಮಿಕ ರೋಗಗಳ ಬಗ್ಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು.ಡೆಂಘಿ ಪ್ರಕರಣಗಳು ಇಳಿಕೆಯಾಗಿದ್ದರೂ ಚಿಕುನ್ ಗುನ್ಯ, ಮಲೇರಿಯಾ ಹರಡದಂತೆ ಎಚ್ಚರಿಕೆ ವಹಿಸಬೇಕು. ಮಳೆ ಸಂದರ್ಭದಲ್ಲಿ ವಿದ್ಯುತ್ ಅಡಚಣೆಯಾಗದಂತೆ ನೋಡಿಕೊಳ್ಳಬೇಕು.ಅಗತ್ಯವಿರುವ ಪ್ರಮಾಣದಲ್ಲಿ ಟ್ರಾನ್ಸ್ಫಾರ್ಮರ್ ಮತ್ತಿತರ ಪರಿಕರಗಳನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.