ಕೃಷಿಗೆ ಸಿಕ್ಕ ಅನುಧಾನ ಎಷ್ಟು ?

ಎತ್ತೆಮ್ಮೆ ಹೂಡುವುದು| ಉತ್ತೊಮ್ಮೆ ಹರಗುವುದು|

ಬಿತ್ತೊಮ್ಮೆ ಹರಗಿ, ಕಳೆತೆಗೆದರಾ ಬೆಳೆಯು|

ಎತ್ತುಗೈಯುದ್ದ ಸರ್ವಜ್ಞ||

39. ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು.

40. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ ­10 ಕೋಟಿ ರೂ. ಒದಗಿಸಲಾಗುವುದು.­

41. ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್‌ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು. 

42. ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು. 

43. ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ 

ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗುವುದು.

44. ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್‌ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ.  ಒದಗಿಸಲಾಗುವುದು. 

45. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್‌ ಹಾರ್ವೆಸ್ಟರ್‌ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, 

2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು. 

ತೋಟಗಾರಿಕೆ

46. ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. 2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು. 

47. ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್‌ ಮಾಡಲು ಕ್ರಮ ವಹಿಸಲಾಗುವುದು.

48. ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು. 

49. ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.

50. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು.

ರೇಷ್ಮೆ

51. ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ.  ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್‌ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು. 

52. ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು.  ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ. 

53. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು. 

ಸಹಕಾರ

65. ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ. 

66. ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂ. ವರೆಗಿನ ಸಾಲಕ್ಕೆ ರಾಜ್ಯ ಸರ್ಕಾರವು ಶೇ. 7 ರಷ್ಟು ಬಡ್ಡಿ ಸಹಾಯಧನ ನೀಡಲಿದೆ.

67. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್‌ ವ್ಯಾನ್‌ (Pick-up Van) ಖರೀದಿಸಲು ಏಳು ಲಕ್ಷ ರೂ. ವರೆಗಿನ ಸಾಲವನ್ನು ಶೇ. ೪ರ ಬಡ್ಡಿ ದರದಲ್ಲಿ ವಿತರಿಸಲಾಗುವುದು. 

68. ಶೀಘ್ರ ಹಾಳಾಗುವ ಹಣ್ಣು, ಹೂವು, ತರಕಾರಿಗಳ ಬೆಲೆ ಕುಸಿತದಿಂದ ರೈತರು ಒತ್ತಡದ ಮಾರಾಟ ಮಾಡುವುದನ್ನು ತಪ್ಪಿಸಿ, ನ್ಯಾಯಯುತ ಬೆಲೆ ಒದಗಿಸುವುದಕ್ಕೆ ನೆರವಾಗಲು ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ KAPPEC ಸಹಯೋಗದೊಂದಿಗೆ ಮಿನಿ ಶೀತಲ ಗೃಹಗಳನ್ನು ಸ್ಥಾಪಿಸಲಾಗುವುದು. 

69. ಕೃಷಿ ಉತ್ಪನ್ನ ಮಾರುಕಟ್ಟೆಗಳು, ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಒದಗಿಸಿ, ಅವರ ಹಿತ ಕಾಯುವ ಸಂಸ್ಥೆಗಳಾಗಬೇಕು ಎಂಬ ಆಶಯ ನಮ್ಮ ಸರ್ಕಾರದ್ದಾಗಿದೆ. ಈ ಉದ್ದೇಶದಿಂದ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಬಲಪಡಿಸಿ, ಆನ್‌ಲೈನ್‌ ಮಾರುಕಟ್ಟೆ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಲಾಯಿತು.

70. ಹಿಂದಿನ ಸರ್ಕಾರವು ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿ ಎ.ಪಿ.ಎಂ.ಸಿ ಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ. ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯ ಮೊದಲು, 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570 ರಿಂದ 600 ಕೋಟಿ ರೂ. ಗಳಷ್ಟಿದ್ದು, 2022-23 ರಲ್ಲಿ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ. ಅಲ್ಲದೆ, ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನು ವಂಚಿಸಿದ, ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತರಕ್ಷಣೆ ಮಾಡಲು ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ.

71. ʻಕಾಯಕ ನಿಧಿʼ ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂ. ಗಳಿಂದ 25,000 ರೂ. ಗಳಿಗೆ ಹೆಚ್ಚಿಸಲಾಗುವುದು. 

ಪಶುಸಂಗೋಪನೆ

54. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ʻಅನುಗ್ರಹʼ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರ ಅದನ್ನು ನಿ‍ರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್‌ಸ್ಥಾಪಿಸಿ ಕುರಿ ಮತ್ತು ಮೇಕೆಗಳಿಗೆ 5,000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂ. ಪರಿಹಾರ ಒದಗಿಸಲಾಗುವುದು.

55. ʻಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆʼ ಎಂಬ ಧ್ಯೇಯವಾಕ್ಯ ಹೊಂದಿರುವ ʻನಂದಿನಿʼಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್‌ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

56. ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ ಚರ್ಮಗಂಟು ರೋಗದ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಹಾಲಿನ ಇಳುವರಿಯಲ್ಲಿ ಶೇ.5 ರಿಂದ ಶೇ.7 ರಷ್ಟು ಇಳಿಕೆಯಾಗಿರುತ್ತದೆ. ಉತ್ತಮ ಹಾಲು ನೀಡುವ ತಳಿಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಲಸಿಕೆಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು.

57. ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಚರ್ಮಗಂಟು ರೋಗದಿಂದ ಒಟ್ಟು 32,045 ಜಾನುವಾರುಗಳು ಮರಣ ಹೊಂದಿರುತ್ತವೆ. ಈ ಪೈಕಿ ಒಟ್ಟು 25,859 ಮರಣ ಹೊಂದಿದ ಜಾನುವಾರುಗಳಿಗೆ 53 ಕೋಟಿ ರೂ. ಪರಿಹಾರಧನವನ್ನು ವಿತರಿಸಲಾಗಿದೆ. ಬಾಕಿ ಇರುವ 5,851 ಮರಣಹೊಂದಿದ ಜಾನುವಾರುಗಳ ಮಾಲೀಕರಿಗೆ ೧೨ ಕೋಟಿ ರೂ. ಪರಿಹಾರಧನವನ್ನು ವಿತರಿಸಲು ಕ್ರಮ ವಹಿಸಲಾಗುವುದು. 

58. ಗ್ರಾಹಕರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಪ್ರೋಟೀನ್‌ಯುಕ್ತ ಮಾಂಸ ಮತ್ತು ಮೊಟ್ಟೆ ಪೂರೈಕೆಗೆ ಅವಕಾಶ ಕಲ್ಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳು ಹಾಗೂ ಉತ್ತಮವಾದ ಮಾರುಕಟ್ಟೆ ಅಭಿವೃದ್ಧಿ ಮಾಡಲಾಗುವುದು.  

ಮೀನುಗಾರಿಕೆ 

59. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.

60. ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ.

61. ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು. 

62. ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು.

63. ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು.

64. ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು. 

 

ಜಲಸಂಪನ್ಮೂಲ

72. ಜಲಸಂಪನ್ಮೂಲ ಇಲಾಖೆಯಡಿ ದಿನಾಂಕ:1-4-2023ರವರೆಗೆ ಅನುಮೋದಿಸಲಾಗಿರುವ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ. ಗಳನ್ನು ಒದಗಿಸುವ ಅವಶ್ಯಕತೆಯಿದೆ. ಈ ಯೋಜನೆಗಳ ವೆಚ್ಚವು ಕಾಮಗಾರಿ ಹಾಗೂ ಭೂಸ್ವಾಧೀನ ವೆಚ್ಚ ಹೆಚ್ಚಳದ ಕಾರಣ 25,000 – 40,000 ಕೋಟಿ ರೂ. ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೇ ಕಳೆದ 6 ತಿಂಗಳ ಅವಧಿಯಲ್ಲಿ 25,548 ಕೋಟಿ ರೂ. ಅಂದಾಜು ವೆಚ್ಚದ 1,274 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಲಾಗಿದೆ.  ಜಲಸಂಪನ್ಮೂಲ ಇಲಾಖೆಯ ಆಯವ್ಯಯ ಹಂಚಿಕೆ ವಾರ್ಷಿಕ ಸರಾಸರಿ 20,000 ಕೋಟಿ ರೂ. ಗಳಷ್ಟಿದ್ದು, ಅನುಮೋದಿಸಿರುವ ಯೋಜನೆಗಳ ಅಂದಾಜು ಮೊತ್ತ ಇದರ ಐದು ಪಟ್ಟು ಹೆಚ್ಚಾಗಿರುವುದು ವಿತ್ತೀಯ ಶಿಸ್ತಿನ ಉಲ್ಲಂಘನೆಗೆ ಸ್ಪಷ್ಟ ನಿದರ್ಶನವಾಗಿದೆ. ಅಲ್ಲದೆ ಕಳೆದ ಆರು ತಿಂಗಳ ಅವಧಿಯಲ್ಲಿಯೇ ಇಲಾಖೆಯ ವಾರ್ಷಿಕ ಆಯವ್ಯಯ ಹಂಚಿಕೆಗಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಿರುವುದು ವಿತ್ತೀಯ ಅಶಿಸ್ತಿನ ಪರಮಾವಧಿಯಲ್ಲದೆ ಇನ್ನೇನು? ಹಿಂದಿನ ಸರ್ಕಾರದ ಈ ವಿವೇಚನಾ ರಹಿತ ಕ್ರಮಗಳಿಂದಾಗಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲದಂತಾಗಿದೆ.

73. ಜಲ ಸಂಪನ್ಮೂಲ ಇಲಾಖೆಯಡಿ ಮಂದಗತಿಯಲ್ಲಿ ಸಾಗುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸುವುದರೊಂದಿಗೆ ಪ್ರಸಕ್ತ ಸಾಲಿನಲ್ಲಿ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ಸುಮಾರು 25,948 ಹೆಕ್ಟೇರ್‌ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗುವುದು.  

74. ಪ್ರಸಕ್ತ ಸಾಲಿನಲ್ಲಿ ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ್ಟಿ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಸುಮಾರು 39,134 ಹೆಕ್ಟೇರ್‌ ಅಚ್ಚುಕಟ್ಟು ಸ್ಥಿರೀಕರಣ ಮಾಡಲಾಗುವುದು.

75. ರಾಜ್ಯದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಇವುಗಳಲ್ಲಿ 19 ಕೆರೆ ತುಂಬಿಸುವ ಯೋಜನೆಗಳನ್ನು 770 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 899 ಕೆರೆಗಳಿಗೆ ನೀರು ತುಂಬಿಸಲಾಗುವುದು.  

76. ನಮ್ಮ ಸರ್ಕಾರದ ಅವಧಿಯಲ್ಲಿ ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಚಾಲನೆಗೊಳಿಸಿದ್ದ 12,912 ಕೋಟಿ ರೂ. ಮೊತ್ತದ ಎತ್ತಿನ ಹೊಳೆ ಯೋಜನೆಯನ್ನು ಹಿಂದಿನ ಸರ್ಕಾರವು ಸಕಾಲದಲ್ಲಿ ಪೂರ್ಣಗೊಳಿಸದ ಕಾರಣ ದರ ಹೆಚ್ಚಳಗೊಂಡು ಈ ಯೋಜನೆಯು 23,252 ಕೋಟಿ ರೂ. ಮೊತ್ತಕ್ಕೆ ಪರಿಷ್ಕೃತಗೊಂಡಿದೆ. ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. 

77. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ವಿವರವಾದ ಯೋಜನಾ ವರದಿ ಹಾಗೂ ಪರಿಸರ ತೀರುವಳಿ ಪ್ರಸ್ತಾವನೆಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಶೀಘ್ರವಾಗಿ ತೀರುವಳಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. Compensatory afforestationಗೆ ಅಗತ್ಯವಿರುವ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಗಳನ್ನು ಜರುಗಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು. 

78. ಮಧ್ಯ ಕರ್ನಾಟಕದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ಡಬಲ್‌ ಇಂಜಿನ್‌ ಎಂದು ಹೇಳಿಕೊಳ್ಳುವ ಸರ್ಕಾರವಿದ್ದಾಗ್ಯೂ, ರಾಷ್ಟ್ರೀಯ ಯೋಜನೆಯನ್ನಾಗಿ ಇಲ್ಲಿಯವರೆಗೂ ಅಧಿಕೃತವಾಗಿ ಅನುಮೋದಿಸಿರುವುದಿಲ್ಲ. ಕೇಂದ್ರ ಸರ್ಕಾರವು 2023-24ನೇ ಸಾಲಿನ ತನ್ನ ಆಯವ್ಯಯದಲ್ಲಿ 5,300 ಕೋಟಿ ರೂ.ಗಳ ಅನುದಾನವನ್ನು ಭದ್ರಾ ಯೋಜನೆಗೆ ಘೋಷಿಸಿದ್ದು ಸದರಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಯೋಜನೆಯ ಅನುಷ್ಠಾನಕ್ಕೆ ಆದ್ಯತೆಯ ಮೇಲೆ  ಕ್ರಮವಹಿಸಲಾಗುವುದು. 

79. ಮಹದಾಯಿ ನ್ಯಾಯಾಧಿಕರಣದಿಂದ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ 3.90 ಟಿ.ಎಂ.ಸಿ. ನೀರಿನ ಬಳಕೆಗಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದ್ದು, ಅವಶ್ಯಕವಿರುವ ಅರಣ್ಯ ತೀರುವಳಿ ಪಡೆದು, ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಯತ್ನಿಸಲಾಗುವುದು.  

80. ಕೇಂದ್ರ ಸರ್ಕಾರದ PMKSY-AIBP ಯೋಜನೆಯಡಿ 2021-26ನೇ ಅವಧಿಗೆ ಪರಿಗಣಿಸಲಾದ ಪಟ್ಟಿಯಲ್ಲಿ ರಾಜ್ಯದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 1 ಮತ್ತು 2ರ ವಿಸ್ತರಣೆ ಹಾಗೂ ಸನ್ನತಿ ಏತ ನೀರಾವರಿ ಯೋಜನೆಗಳನ್ನು ಗುರುತಿಸಲಾಗಿದೆ. ಸದರಿ ಯೋಜನೆಗಳಿಗೆ ಸಕ್ಷಮ ಪ್ರಾಧಿಕಾರಗಳ ತೀರುವಳಿ ಪಡೆದು, ಕೇಂದ್ರ ಸಹಾಯಧನ ಪಡೆಯಲು ಆದ್ಯತೆಯ ಕ್ರಮ ಜರುಗಿಸಲಾಗುವುದು. 

81. ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ (Balancing reservoir) ನಿರ್ಮಾಣ ಯೋಜನೆಯನ್ನು ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ, ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು. 

82. ಕೃಷ್ಣಾ ನ್ಯಾಯಾಧಿಕರಣ-2ರ ತೀರ್ಪಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಹಂಚಿಕೆಯಾಗಿರುವ 130 ಟಿ.ಎಂ.ಸಿ ನೀರಿನ ಬಳಕೆಗಾಗಿ ಯೋಜನಾ ಕಾಮಗಾರಿಗಳ ಜೊತೆಗೆ ಭೂಸ್ವಾಧೀನತೆ ಹಾಗೂ ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕೆ ಆದ್ಯತೆ ನೀಡಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು.  

ಸಣ್ಣ ನೀರಾವರಿ

83. ನಮ್ಮ ಸರ್ಕಾರದ ಹಿಂದಿನ ಅವಧಿಯ ಅಂತ್ಯದಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ 5,655 ಕೋಟಿ ರೂ. ಮೊತ್ತದ ಬಾಕಿ ಕಾಮಗಾರಿಗಳಿದ್ದು, ನಿಕಟ ಪೂರ್ವ ಸರ್ಕಾರವು ತಮ್ಮ ಅವಧಿಯ ಅಂತ್ಯಕ್ಕೆ ಇದನ್ನು 12,729 ಕೋಟಿ ರೂ. ಗಳಿಗೆ ಹೆಚ್ಚಿಸಿದೆ. ಹಾಗೆಯೇ 2017-18 ರಲ್ಲಿ 440 ಕೋಟಿ ರೂ.ಗಳ ಬಿಲ್ಲುಗಳು ಪಾವತಿಗೆ ಬಾಕಿಯಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಇದು ಸುಮಾರು 2,000 ಕೋಟಿ ರೂ. ಗಳಿಗೆ ಏರಿದೆ. ಹಿಂದಿನ ಸರ್ಕಾರದ ಆರ್ಥಿಕ ಅಶಿಸ್ತಿನಿಂದಾಗಿ ಬಾಕಿ ಉಳಿದಿರುವ ಬಾಧ್ಯತೆಗಳ ನೈಜತೆಯನ್ನು ಪರಿಶೀಲಿಸಿ ತೀರುವಳಿಗೊಳಿಸಲು ಕ್ರಮವಹಿಸಲಾಗುವುದು. 

84. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ  ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಯೋಜನೆಯ ಮೂಲಕ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿ ಈ ಜಿಲ್ಲೆಗಳ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡು ರೈತರು ಸಂತಸಗೊಂಡಿದ್ದಾರೆ.  ಪ್ರಸ್ತುತ ಎರಡನೇ ಹಂತದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 296 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 529 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 

85. ಕೆರೆಗಳ ಸುತ್ತ ಜೀವಪರಿಸರವನ್ನು ಉಳಿಸಿಕೊಂಡು, ಅವುಗಳ ಪುನರುಜ್ಜೀವನಗೊಳಿಸುವುದಕ್ಕಾಗಿ ಕೆರೆಗಳ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಿ ಕೆರೆ ಅಭಿವೃದ್ಧಿಗೆ ಪಾಲುದಾರರನ್ನಾಗಿ ಮಾಡಿ ಜಲಬಳಕೆ ಮಾಡಲು ಅರ್ಥಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು.

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top