ಹೊಸಪೇಟೆ : ತುಂಗಭದ್ರಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದುದರಿಂದ ಯಾವುದೇ ಕ್ಷಣದಲ್ಲಾದರೂ ನದಿಗೆ ನೀರು ಬಿಡುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಎಚ್ಚರದಿಂದಿರಬೇಕು ಎಂದು ತುಂಗಭದ್ರಾ ಆಡಳಿತ ಮಂಡಳಿ ಸಂದೇಶ ರವಾನಿಸಿದೆ.
ಹೌದು, ಶಿವಮೊಗ್ಗ ಸೇರಿದಂತೆ ಮಲೆನಾಡ ಪ್ರದೇಶದಲ್ಲಿ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ದಿನೇ ದಿನೇ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಜಲಾಶಯ ತುಂಬಿಕೊಳ್ಳಲಿದೆ. 105.788 TMC ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 65.110 ಟಿಎಂಸಿ ನೀರು ಸಂಗ್ರಹವಾಗಿದೆ. ಅಂತೆಯೇ ಕಳೆದ ಒಂದು ವಾರದಿಂದ ಪ್ರತಿನಿತ್ಯ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ಸ್ ನೀರು ಒಳಹರಿವು ಇದೆ. ಇದು ಹೀಗೆಯೇ ಮುಂದುವರೆದಲ್ಲಿ ಬೆರಳೆಣಿಕೆಯ ದಿನಗಳಲ್ಲಿಯೇ ಜಲಾಶಯ ಭರ್ತಿಗೊಳ್ಳಲಿದೆ ಎನ್ನಲಾಗಿದೆ.
ಈಗಾಗಲೇ ತುಂಗಭದ್ರ ಜಲಾಶಯದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದ್ದು, ಒಳಹರಿವಿನ ಪ್ರಮಾಣ ಇನ್ನೂ ಹೆಚ್ಚಾದರೆ ಕ್ರಸ್ಟ್ ಗೇಟ್ ಗಳಿಂದ ನೀರನ್ನು ನದಿಗೆ ಬಿಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಯಾವುದೇ ಕ್ಷಣದಲ್ಲೂ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಬಹುದಾಗಿದ್ದು, ನದಿ ಪಾತ್ರದ ಜನರಿಗೆ ತುಂಗಭದ್ರಾ ಆಡಳಿತ ಮಂಡಳಿ ಎಚ್ಚರಿಕೆ ಸಂದೇಶ ರವಾನಿಸಿದೆ. ಆದಷ್ಟು ನದಿ ಪಾತ್ರದ ಜನರು ಸಂರಕ್ಷಿತ ಪ್ರದೇಶಕ್ಕೆ ತೆರಳುವಂತೆ ಹಾಗೂ ನದಿಯಲ್ಲಿ ಇಳಿಯದಂತೆ ಸೂಚಿಸಲಾಗಿದೆ.