ಬೆಂಗಳೂರು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂ ಕುಸಿತ ಹಿನ್ನೆಲೆಯಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಸೇರಿ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಭೂಕುಸಿತದಲ್ಲಿ ನಾಲ್ವರು ಕನ್ನಡಿಗರು ಮೃತಪಟ್ಟಿದ್ದು, ಓರ್ವ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕುರಿತು ವರದಿಯಾಗಿದೆ. ಇದರ ಬೆನ್ನಲ್ಲೆ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಅವರ ಸೂಚನೆಯ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್, ಪ್ರವಾಹ ಪೀಡಿತ ವಯನಾಡ್ ಪ್ರದೇಶಕ್ಕೆ ಪ್ರಸ್ತುತ ನಡೆಯುತ್ತಿರುವ ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗೆ ತೆರಳಿದ್ದಾರೆ.
ರಾಜ್ಯದ ಎರಡು ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ವಯನಾಡಿನ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಅಲ್ಲದೇ, ಕರ್ನಾಟಕದ ಸಂತ್ರಸ್ತರಿಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಕೇರಳ ಸರ್ಕಾರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ.
ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್ ಅಧಿಕಾರಿಗಳಾದ ಪಿ.ಸಿ. ಜಾಫರ್ ಹಾಗೂ ದಿಲೀಶ್ ಶಶಿ ಅವರನ್ನು ನಿಯೋಜಿಸಲಾಗಿದೆ. ಪಿ.ಸಿ. ಜಾಫರ್ ಮೊಬೈಲ್ ಸಂಖ್ಯೆ ೯೪೪೮೩೫೫೫೭೭ ಹಾಗೂ ದಿಲೀಶ್ ಶಶಿ ೯೪೪೬೦೦೦೫೧೪ಇದಲ್ಲದೇ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಚಾಮರಾಜನಗರ ಡಿಸಿ ಕಚೇರಿಯ ಸಹಾಯವಾಣಿ ಸಂಖ್ಯೆ: ೦೮೨೨೬-೨೨೩೧೬೩, ೦೮೨೨೬-೨೨೩೧೬೧, ೦೮೨೨೬-೨೨೩೧೬೦ ವಾಟ್ಸಾಪ್ ಸಂಖ್ಯೆ: ೯೭೪೦೯ ೪೨೯೦೧