ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಜತೆಗೆ ರಾಜ್ಯದಲ್ಲಿ ಜೂನ್ ಮೊದಲ ವಾರದಲ್ಲೇ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮುಂದಿನ 2-3 ದಿನಗಳಲ್ಲಿ ನೈಋತ್ಯ ಮತ್ತು ಆಗ್ನೇಯ ಸಮುದ್ರ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಉಳಿದ ಭಾಗಗಳಿಗೆ ನೈರುತ್ಯ ಮುಂಗಾರು ಮತ್ತಷ್ಟು ಪ್ರವೇಶಿಸಲು ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ. ಇನ್ನು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯದ ಕೆಲ ಭಾಗಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಅಲ್ಲದೆ, ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ವಾಯು ಚಂಡಮಾರುತದ ಪ್ರಸರಣ ಉಂಟಾಗುವುದರಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಅಥವಾ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು ಸುಮಾರು 34°C ಮತ್ತು ಕನಿಷ್ಠ ತಾಪಮಾನವು 21°C ಆಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಜತೆಗೆ ಮೇ ಕೊನೆಯ ವಾರದಲ್ಲಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಏಕಾಏಕಿ ಹವಾಮಾನ ಬದಲಾಗಲಿದೆ ಎಂದು ಸೂಚಿಸಿದೆ.
ಇಂದು ಎಲ್ಲೆಲ್ಲಿ ಮಳೆಯಾಗಲಿದೆ
ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ 40-50 ಕಿ ಮೀ ವೇಗದ ಗಾಳಿ ಮತ್ತು ಆಲಿಕಲ್ಲು ಸಹಿತ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದರಂತೆ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆಯ ಮಹತ್ವದ ಎಚ್ಚರಿಕೆ
ಭಟ್ಕಳದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿ 11 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮಳೆಗಾಲವೂ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಮತ್ತು ಮಳೆ ಗುಡುಗು, ಸಿಡಿಲನ ಜತೆಗೆ ಗಾಳಿಯ ವೇಗವೂ ಹೆಚ್ಚಿರುವುದರಿಂದ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಅಲ್ಲದೆ ಯಾರೂ ಕೂಡ ಸಮುದ್ರ, ನದಿಯ ನೀರಿಗೆ ಇಳಿಯಬಾರದು. ಇಲಾಖೆ ನೀಡುವ ಮುನ್ಸೂಚನೆ ಹಾಗೂ ಎಚ್ಚರಿಕ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹವಾಮಾನ ಇಲಾಖೆ ನಿರ್ದೇಶಿಸಿದೆ.



