ದೇವನಹಳ್ಳಿ,ಫೆ,28 : ಪ್ರತಿ ವರ್ಷ ಫೆಬ್ರವರಿ 28 ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ ಎಂದು ಶೃಂಗೇರಿ ಶಾರದ ಪ್ರೌಢಶಾಲೆಯ ಕಾರ್ಯದರ್ಶಿ ಚಂದ್ರಮುಖಿ ರಮೇಶ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಶೃಂಗೇರಿ ಶಾರದಾ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ, ಈ ದಿನದ ವಿಶೇಷವಾಗಿ ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ – ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಮಧುಕುಮಾರ್ ಮಾತನಾಡಿ, ಬದುಕಿನ ಪ್ರತೀ ಸಮಸ್ಯೆಗೂ ವಿಜ್ಞಾನದಲ್ಲಿ ಪರಿಹಾರವಿದೆ. ಆದ್ದರಿಂದ ಮಕ್ಕಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದಲೇ ಗಣಿತ ಮತ್ತು ವಿಜ್ಞಾನಗಳ ಬಗ್ಗೆ ಒಲವು ಮೂಡಿಸಬೇಕು. ಈಗ ಮಾನವಿಕಗಳ ಕಲಿಕೆಯಲ್ಲೂ ತಂತ್ರಜ್ಞಾನ ನಿರ್ಣಾಯಕ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಏನನ್ನೇ ಕಲಿತರೂ ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಜೊತೆಗೆ ವಿಜ್ಞಾನವು ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪರಿಸರ ಮಾಲಿನ್ಯದ ಬಗ್ಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಾಲೆಯ ಶಿಕ್ಷಣದ ಸಂಯೋಜಕರಾದ ಉಮಾದೇವಿ, ಸಹ ಶಿಕ್ಷಕಿ ನಳಿನ, ಶಿವದರ್ಶನ್, ರಮ್ಯ, ಚಂದ್ರಿಕ, ಅರ್ಚನ, ಪಲ್ಲವಿ, ಮುನಿಕೃಷ್ಣಪ್ಪ, ನಯಿಮುನ್ನಿಸಾ ಉಪಸ್ಥಿತರಿದ್ದರು.
