ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿಯ ವರ್ತನೆಯಿಂದ ಉದ್ಭವಿಸಿದ ಪರಿಸ್ಥಿತಿಗೆ ಸರ್ಕಾರವೇ ಪರೋಕ್ಷವಾಗಿ ಪ್ರಚೋದನೆ ನೀಡಿದಂತಾಗಿದೆ ಎಂದು ಹೇಳಿದ್ದಾರೆ.
ಗಣಪತಿ ವಿಸರ್ಜನಾ ಶೋಭಾಯಾತ್ರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಶಾಂತಿಯುತವಾಗಿ ನಡೆದಿದೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ಪ್ರತಾಪ್ ಸಿಂಹ ವಿರುದ್ಧದ ಪ್ರಕರಣವು ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯ ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವಂತಹ ಕ್ರಮವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರತಾಪ್ ಸಿಂಹ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ರದ್ದುಗೊಳಿಸಿ ಸರ್ಕಾರ ವಿವೇಕ ಮೆರೆಯಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.