ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಬಿರುಸು ಗೊಂಡಿದ್ದು, ಬಜೆಟ್ ಅಧಿವೇ ಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡುವ ಸಾಧ್ಯತೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಈ ಭೇಟಿಯ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಚಿವ ಸಂಪುಟ ಪುನರ್‍ರಚನೆ ಕುರಿತ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಜೆಟ್ ಅಂಗೀಕಾರದ ಬಳಿಕ ಸಚಿವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರಿಗೆ ಬಜೆಟ್‍ನ ಪ್ರಮುಖ ಅಂಶಗಳ ಬಗ್ಗೆ ವಿವರಿಸುವುದು ರೂಢಿ. ಆದರೆ ಈ ಬಾರಿ ಸಮಯಾಭಾವದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಇದೀಗ ಅಧಿವೇಶನ ಮುಗಿದ ತಕ್ಷಣವೇ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ.
ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾದ ವಿಷಯವೆಂದರೆ ಸಚಿವ ಸಂಪುಟ ಪುನರ್‍ರಚನೆ. ಮೂಲ ಗಳ ಪ್ರಕಾರ, ಸುಮಾರು 12ಕ್ಕೂ ಹೆಚ್ಚು ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ನಾಯಕತ್ವದ ಪ್ರಶ್ನೆ ಇತ್ಯರ್ಥವಾಗುವವರೆಗೆ ಸಂಪುಟ ಪುನರ್‍ರಚನೆ ಮಾಡಬಾರದು ಎಂದು ಪಟ್ಟು ಹಿಡಿದಿದ್ದಾರೆ.
ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಬಣ ರಾಜಕೀಯ ಚತುರ ತೆಯಿಂದ ಮುಂದಡಿ ಇಟ್ಟಿದ್ದು, ಹಿರಿಯ ಶಾಸಕರನ್ನು ಸಕ್ರಿಯಗೊಳಿಸಿದೆ. ಈಗಾಗಲೇ ಕಾಂಗ್ರೆಸ್‍ನ ಕೆಲ ಹಿರಿಯ ಶಾಸಕರು ಸಭೆ ನಡೆಸಿ, ಸಂಪುಟ ಪುನರ್‍ರಚನೆ ಮಾಡಿ ಅನುಭವಿಗಳಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮೂರಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಶಾಸಕರನ್ನು ಕಡೆಗಣಿಸುವುದು ಸರಿಯಲ್ಲ ಎಂಬ ಆಕ್ಷೇಪವೂ ವ್ಯಕ್ತವಾಗಿದೆ.
ಪದೇಪದೇ ನಾಯಕತ್ವ ಬದಲಾವಣೆಯ ಚರ್ಚೆಯಿಂದ ಉಂಟಾಗಿರುವ ಗೊಂದಲಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದಲೇ ಸಿದ್ದರಾಮಯ್ಯ ಸಂಪುಟ ಪುನರ್‍ರಚನೆಗೆ ಮುಂದಾಗಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿದೆ. ಒಮ್ಮೆ ಸಂಪುಟ ಪುನರ್‍ರಚನೆ ನಡೆದರೆ ಮುಂದಿನ ಅವಧಿಯಲ್ಲಿ ನಾಯಕತ್ವದ ಗೊಂದಲ ತಣ್ಣಗಾಗಬಹುದು ಎಂಬ ಲೆಕ್ಕಾಚಾರವೂ ಇದೆ.
ಇದೇ ವೇಳೆ ಬಜೆಟ್ ಅಧಿವೇಶನದ ಬಳಿಕ ಕೆಲವು ಹಿರಿಯ ಶಾಸಕರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಅದೇ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈವರೆಗೆ ಹಾಲು-ಜೇನಿನಂತಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಬಾಂಧವ್ಯ ಬಜೆಟ್ ಅಧಿವೇಶನದ ನಂತರ ಹೊಸ ತಿರುವು ಪಡೆಯುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ.
ಇತ್ತ ಡಿ.ಕೆ.ಶಿವಕುಮಾರ್ ಪರವಾಗಿ ಕಿರಿಯ ಶಾಸಕರು ಬ್ಯಾಟಿಂಗ್ ಆರಂಭಿಸಿದ್ದಾರೆ. ಅವರಿಗೆ ಮುಂದಿನ ನಾಯಕತ್ವದ ಅವಕಾಶ ನೀಡಬೇಕು ಎಂದು ಒತ್ತಡ ಹೆಚ್ಚಿಸುತ್ತಿದ್ದಾರೆ. ಇದರ ನಡುವೆ ತೆರೆಮರೆಯಲ್ಲಿ ನಡೆಯುತ್ತಿರುವ ಕುರ್ಚಿ ಪೈಪೆÇೀಟಿ ಕಾಂಗ್ರೆಸ್ ರಾಜಕೀಯದಲ್ಲಿ ತೀವ್ರ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ.
ಇನ್ನೊಂದೆಡೆ, ಅಸ್ಸಾಂ ವಿಧಾನಸಭೆ ಚುನಾವಣೆಯ ಉಸ್ತುವಾರಿಯಾಗಿ ಡಿ.ಕೆ.ಶಿವಕುಮಾರ್ ಪದೇಪದೇ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಆದರೂ ರಾಜಕೀಯ ಸಮೀಕರಣಗಳಲ್ಲಿ ಸ್ಪಷ್ಟತೆ ಕಂಡುಬಂದಿಲ್ಲ. ಹೀಗಾಗಿ ಈಗ ಸ್ವತಃ ಸಿದ್ದರಾಮಯ್ಯವೇ ದೆಹಲಿಗೆ ತೆರಳಿ ಚರ್ಚೆ ನಡೆಸುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಯಾವ ರೀತಿಯ ಬದಲಾವಣೆಗಳು ಸಂಭವಿಸಬಹುದು ಎಂಬುದನ್ನು ಕಾದುನೋಡಬೇಕಾಗಿದೆ.