ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ನಂತರ ಮಾಗಡಿ ತಾಲೂಕಿನ ಚಿಕ್ಕಯ್ಯ ಎಂಬುವವರನ್ನು ವಿವಾಹವಾದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು.
ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
2023 ರ ಅಕ್ಟೋಬರ್‌ನಲ್ಲಿ ಆಸ್ತಮಾದ ತೀವ್ರ ಉಲ್ಬಣದಿಂದಾಗಿ ಅಕ್ಟೋಬರ್ 3 ರಂದು ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಲುಮರದ ತಿಮ್ಮಕ್ಕರನ್ನು ದಾಖಲಾಗಿತ್ತು. ಅಲ್ಲಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಿಎಂ -ಡಿಸಿಎಂ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.



