ಹೊಸಪೇಟೆ: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮಬಾರಿಗೆ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಗುರುವಾರದಂದು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಥಮಬಾರಿಗೆ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯುತ್ತಿರುವುದು ಸಂತಸವಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯ ವೃದ್ಧಿಸುತ್ತದೆ ಹಾಗೂ ಹೊಸ ಚೈತನ್ಯ ಮತ್ತು ಉತ್ಸಾಹ ಮೂಡುತ್ತದೆ ಎಂದು ಹೇಳಿದರು. ತುಂಬಾ ಬಿಸಿಲು ಇರುವುದರಿಂದ ಎಲ್ಲರು ಸುರಕ್ಷಿತವಾಗಿ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಸ್ಪೂರ್ತಿಯಿಂದ ಆಟವಾಡಿ ವಿಜೇತರಾಗಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಂಕಮ್ಮ, ಸಹಾಯಕ ಆಯುಕ್ತ ಸಿದ್ಧರಾಮೇಶ್ವರ, ಹುಡಾ ಅಧ್ಯಕ್ಷ ಆಶೋಕ ಜೀರೆ, ಬಳ್ಳಾರಿ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾಜಿ ರಾವ್, ವಿಜಯನಗರ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಹಾಗೂ ವಿಜಯನಗರ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಇತರರು ಇದ್ದರು.