ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಕಲುಷಿತ ನೀರಿನಿಂದ ಯಾರಿಗಾದರೂ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದಿದ್ದಾರೆ.

ಮೈಸೂರಿನಲ್ಲಿ ಕಲುಷಿತ ನೀರು ಕುಡಿದು ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಡಳಿತಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಈ ಎಚ್ಚರಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ, ಪೂರ್ವ ಮುಂಗಾರು ಮಳೆ ಪ್ರಾರಂಭ ಆಗಿರುವುದರಿಂದ ಕೃಷಿಗೆ ಅಗತ್ಯವಾದ ಬಿತ್ತೆನ ಬೀಜ, ಗೊಬ್ಬರ ಹಾಗೂ ರೈತರಿಗೆ ಸಹಕಾರಿ ಸಂಘಗಳಲ್ಲಿ ಸಾಲ ಸೌಲಭ್ಯ ದೊರಕಿಸಲು ಕ್ರಮಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ, ಇದಕ್ಕೆ ಕಾರಣ ಕಲುಷಿತ ನೀರು, ಕಲುಷಿತ ನೀರಿಗೆ ಸಂಬಂಧಪಟ್ಟ ಇಂಜಿನಿಯರುಗಳೇ ಕಾರಣ. ಕುಡಿಯಲು ನೀರು ಯೋಗ್ಯವೇ, ಇಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ, ಇದಕ್ಕೆ ಯಾರು ಜವಾಬ್ದಾರಿ.

ತಪ್ಪಿತಸ್ಥ ಅಧಿಕಾರಿಗಳ ಅಮಾನತು

ರಾಜ್ಯದೆಲ್ಲೆಡೆ ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು, ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು.

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ, ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು, ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು, ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು, ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ.

ಮೇನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ, ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ, ಮೇ ತಿಂಗಳ ಗುರಿ 2.95 ಲಕ್ಷ ಹೆಕ್ಟೇರ್ ಪ್ರದೇಶ, ಸಾಧನೆಯಾಗಿರುವುದು 68,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿ ಇದೆ.

ಜೂನ್ ೬ ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ, ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು, ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು, ಫೆಬ್ರುವರಿಯಲ್ಲಿ ಬಜೆಟ್ ಮಂಡಿಸಲಾಗಿದೆ, ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ.

ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ, ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು.

 

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top