ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ವಿಧಾನಸಭೆಯ ಆರ್‌.ಅಶೋಕ

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ ಎಂದರು.  

ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದರು.

 ದೇವೇಗೌಡರ ಭೇಟಿ :  ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top